ರಾಜಕೀಯ ಸುದ್ದಿ

ಶಾಸಕರು ಐಪಿಎಲ್ ಉಚಿತ ಟಿಕೆಟ್ ಕೇಳುವುದು ತಪ್ಪು: ಡಿ.ಕೆ. ಸುರೇಶ್

Share It

ಬೆಂಗಳೂರು: “ಉಚಿತವಾಗಿ ಟಿಕೆಟ್ ಕೇಳಿರುವುದು ತಪ್ಪು. ಪಂದ್ಯ ವೀಕ್ಷಣೆ ಮಾಡುವ ಆಸೆ ಇರುವವರು ವೈಯಕ್ತಿಕವಾಗಿ ಹಣ ಕೊಟ್ಟು ಹೋಗಿ ನೋಡಲಿ. ಇದು ಉತ್ತಮವಾದುದು” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಪ್ರತಿಕ್ರಿಯೆ ನೀಡಿದರು. ಶಾಸಕರಿಗೆ ಉಚಿತವಾಗಿ ಐಪಿಎಲ್ ಟಿಕೆಟ್ ನೀಡಬೇಕು ಎಂಬ ಬೇಡಿಕೆ ಬಗ್ಗೆ ಕೇಳಿದಾಗ, “ಈ ಬಗ್ಗೆ ಯಾರು ಮಾತನಾಡುತ್ತಿದ್ದಾರೆ ಅದು ಮಹಾಪರಾಧ. ಐಪಿಎಲ್ ದುರ್ಘಟನೆ ಸಂದರ್ಭದಲ್ಲಿ ಅವರು ಯಾವ ರೀತಿ ವಾಗ್ದಾಳಿ ಮಾಡಿದ್ದರು, ಪದ ಬಳಸಿದ್ದರು ಎಂದು ತೆಗೆದು ನೋಡಲಿ. ಮೊದಲಿನಿಂದಲೂ ಟಿಕೆಟ್ ನೀಡುತ್ತಾ ಬಂದಿದ್ದಾರೆ.

ಇದನ್ನು ಅಪಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿ ಶಾಸಕರು ಕೂಡ ಐಪಿಎಲ್ ಟಿಕೆಟ್ ಪಡೆದಿದ್ದಾರೆ. ಐಪಿಎಲ್ ರಾಷ್ಟ್ರವನ್ನು ಪ್ರತಿನಿಧಿಸುವ ಪಂದ್ಯಾವಳಿ ಅಲ್ಲ. ವಾಣಿಜ್ಯ ಉದ್ದೇಶಿತ ಪಂದ್ಯಾವಳಿ. ಇವುಗಳ ಬಗ್ಗೆ ಜನಪ್ರತಿನಿಧಿಗಳು ಹೆಚ್ಚು ಗಮನಹರಿಸುವುದು ಒಳ್ಳೆಯದಲ್ಲ” ಎಂದು ಹೇಳಿದರು.

ಬೆಂಗಳೂರಿನ ನಾಲ್ಕು ಕಡೆ ಕ್ರೀಡಾಂಗಣಗಳನ್ನು ನಿರ್ಮಿಸಬೇಕು: ಚಿನ್ನಸ್ವಾಮಿ ಕ್ರೀಡಾಂಗಣ ಬೇರೆಡೆ ಸ್ಥಳಾಂತರ ಮಾಡಬೇಕು ಎಂಬ ಚರ್ಚೆ ಬಗ್ಗೆ ಕೇಳಿದಾಗ, “ಈಗಾಗಲೇ ನಾನು ಆಯ್ಕೆ ಮಾಡಿ, ಸೂಚಿಸಿದ ಜಾಗದಲ್ಲಿ ಹೊಸ ಕ್ರೀಡಾಂಗಣ ಮಾಡಲು ಸರ್ಕಾರ ಮನ್ನಣೆ ನೀಡಿದೆ. ಸೂರ್ಯ ಸಿಟಿಯಲ್ಲಿ ಕ್ರೀಡಾಂಗಣ ಮಾಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದು ನಾನೇ. ಬೆಂಗಳೂರಿನ ನಾಲ್ಕು ದಿಕ್ಕಿನಲ್ಲಿ ನಾಲ್ಕು ಕ್ರೀಡಾಂಗಣ ಮಾಡಬೇಕು.

ಕಂಠೀರವ ಕ್ರೀಡಾಂಗಣ, ಕೆಎಸ್ ಸಿಎ, ಫುಟ್ಬಾಲ್ ಕ್ರೀಡಾಂಗಣ ಹೊರತಾಗಿ ಬೇರೆ ಯಾವುದೇ ಕ್ರೀಡಾಂಗಣವಿಲ್ಲ. ಇಷ್ಟು ದೊಡ್ಡ ಜನಸಂಖ್ಯೆ ಇರುವ ನಗರದಲ್ಲಿ ಯುವಕರಿಗೆ ಕ್ರೀಡೆಯಲ್ಲಿ ಪ್ರೋತ್ಸಾಹ ನೀಡಬೇಕಾದರೆ ನಾಲ್ಕು ದಿಕ್ಕಿನಲ್ಲಿ ಕ್ರೀಡಾಂಗಣ ನಿರ್ಮಿಸಬೇಕು ಎಂದು ಸಲಹೆ ನೀಡಿದ್ದೆ. ನಾನು ಲೋಕಸಭೆ ಸದಸ್ಯನಾಗಿದ್ದಾಗ, ನನ್ನದೇ ಕ್ಷೇತ್ರದ ಸೂರ್ಯ ಸಿಟಿಯಲ್ಲಿ 100 ಎಕರೆ ಮೀಸಲಿಡಬೇಕು ಎಂದು ಹೇಳಿದ್ದೆ ಎಂದು ತಿಳಿಸಿದರು.


Share It

You cannot copy content of this page