ಬೆಂಗಳೂರು: ಕರ್ನಾಟಕ ರಾಜ್ಯ ಪೌಢ ಶಿಕ್ಷಣ ಪರೀಕ್ಷಾ ಮಂಡಳಿ (ಎಸ್ಎಸ್ಎಲ್ಸಿ) ನಡೆಸುವ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳನ್ನು ಅಂಕಗಳ ಬದಲಿಗೆ ಗ್ರೇಡ್ ನೀಡುವುದಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ಪ್ರಸ್ತಾವವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಬೆಂಗಳೂರಿನ ಹೆಚ್.ಎನ್.ಚಂದನಾ ಮತ್ತು ಎಸ್.ವೆಂಕಟೇಶ್ ಎಂಬವರು ಈ ಅರ್ಜಿ ಸಲ್ಲಿಸಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಆಯುಕ್ತರು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಪ್ರತಿವಾದಿಗಳನ್ನಾಗಿಸಿದ್ದು, ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಸಚಿವ ಮಧು ಬಂಗಾರಪ್ಪ ಅವರು ಹಿಂದಿ ಭಾಷೆ ಸೇರಿ ತೃತೀಯ ಭಾಷೆಗಳು ಕಡ್ಡಾಯವಲ್ಲ. ಈ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ಗಳನ್ನಾಗಿ ಪರಿಗಣಿಸಲಾಗುತ್ತದೆ. ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ದ್ವಿಭಾಷಾ ಸೂತ್ರ ಜಾರಿಗೆ ತರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಸಚಿವರು ನಿರ್ಧಾರವನ್ನು ಪ್ರಕಟಿಸುವುದಕ್ಕೂ ಮುನ್ನ ಸಾರ್ವಜನಿಕ ಚರ್ಚೆ ನಡೆಸಿಲ್ಲ. ಸಚಿವ ಸಂಪುಟದ ಅನುಮೋದನೆ ಪಡೆದಿಲ್ಲ ಹಾಗೂ ಭಾಷಾ ತಜ್ಞರ ಸಲಹೆ ಇಲ್ಲದೇ ಏಕಪಕ್ಷೀಯವಾಗಿ ತೆಗೆದುಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಅಂದರೆ ಮಾ. 31ರಂದು ಈ ರೀತಿಯ ಹೇಳಿಕೆ ಹೊರಬಿದ್ದಿರುವುದರಿಂದ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ. ಆದರೆ, ಈವರೆಗೂ ಈ ಕುರಿತಂತೆ ಯಾವುದೇ ಅಧಿಕೃತ ಸರ್ಕಾರಿ ಆದೇಶ ಅಥವಾ ಅಧಿಸೂಚನೆ ಹೊರಬಂದಿಲ್ಲ. ಸಚಿವರ ಈ ನಿರ್ಧಾರಕ್ಕಾಗಿ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಅಲ್ಲದೆ, ಸಚಿವರ ಈ ನಿರ್ಧಾರ ಸಂವಿಧಾನದ ಪರಿಚ್ಛೇದ 14ರಡಿ ಸಮಾನತೆ ಹಕ್ಕನ್ನು ಉಲ್ಲಂಘಿಸುತ್ತದೆ.
ಜತೆಗೆ, ಪರಿಚ್ಛೇದ 21ಎ ಶಿಕ್ಷಣ ಹಕ್ಕಿನ ಮೇಲೆ ಪರಿಣಾಮ ಬೀರಿದ್ದು, ವಿದ್ಯಾರ್ಥಿಗಳ ಭವಿಷ್ಯವನ್ನು ಅಸ್ಥಿರಗೊಳಿಸುತ್ತದೆ. ವಿದ್ಯಾರ್ಥಿಗಳ ಭವಿಷ್ಯದ ಮೇಲೆ ತಾರತಮ್ಯ ಮಾಡಿದಂತಾಗಲಿದೆ. ಸರ್ಕಾರದ ಅಧಿಕೃತ ಆದೇಶವಿಲ್ಲದೆ ನೀತಿ ಜಾರಿಗೆ ತರಲು ಸಾಧ್ಯವಿಲ್ಲ. ಆದ್ದರಿಂದ ಸರ್ಕಾರ ನಿರ್ಧಾರ ರದ್ದುಪಡಿಸಬೇಕು ಎಂದು ಪೀಠ ತಿಳಿಸಿದೆ. ಆದ್ದರಿಂದ ನ್ಯಾಯಪೀಠ ಮಧ್ಯಪ್ರವೇಶಿಸಬೇಕು. ಸಚಿವರ ನೀಡಿರುವ ವಿವಾದಾತ್ಮಕ ಹೇಳಿಕೆಗಳ ಜಾರಿಗೆ ತಡೆ ನೀಡಬೇಕು ಆಗ್ರಹಿಸಲಾಗಿದೆ.

