ಪಟ್ನಾ: ಬಿಹಾರ ಸರ್ಕಾರವು ಜೂನ್ 21ರಂದು ನಡೆಯಲಿರುವ ನೀಟ್-ಯುಜಿ-2026ರ ಮರುಪರೀಕ್ಷೆಯನ್ನು ಎದುರಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಮಹತ್ವದ ಸೌಲಭ್ಯವನ್ನು ಘೋಷಿಸಿದೆ. ಪರೀಕ್ಷಾ ಕೇಂದ್ರಗಳಿಗೆ ತೆರಳಲು ಸರ್ಕಾರಿ ಬಸ್ಸುಗಳಲ್ಲಿ ಅವರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ‘ಎಕ್ಸ್’ ವೇದಿಕೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಈ ಮೂಲಕ ರಾಜ್ಯದ ಎಲ್ಲಾ ನೀಟ್ ಪರೀಕ್ಷಾರ್ಥಿಗಳ ಅನುಕೂಲಕ್ಕಾಗಿ ಈ ಉಚಿತ ಸಾರಿಗೆ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ.
ಬಸ್ ನಿಲ್ದಾಣಗಳು, ರೈಲ್ವೇ ನಿಲ್ದಾಣಗಳು ಹಾಗೂ ಇತರ ಪ್ರಮುಖ ಪ್ರದೇಶಗಳಲ್ಲಿ ಪರೀಕ್ಷೆ ಬರೆಯುವವರಿಗೆ ಮತ್ತು ಅವರ ಹೆತ್ತವರಿಗೆ ಶುದ್ಧ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆಯನ್ನು ಕಲ್ಪಿಸುವಂತೆಯೂ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮೂಲತಃ ಮೇ 3ರಂದು ನಡೆದಿದ್ದ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಅದನ್ನು ರದ್ದುಪಡಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ತನಿಖೆ ನಡೆಸುತ್ತಿದೆ. ಇದೇ ಸಂದರ್ಭದಲ್ಲಿ ಎನ್ಟಿಎ ಮರುಪರೀಕ್ಷೆಯ ದಿನಾಂಕವನ್ನು ಪ್ರಕಟಿಸಿತ್ತು.

