ಉಪಯುಕ್ತ ಸುದ್ದಿ

ರಾಜ್ಯದಲ್ಲಿ ಮುಂಗಾರು ಚುರುಕು: ಮೂರು ಜಿಲ್ಲೆಗೆ ಆರೆಂಜ್​​ ಅಲರ್ಟ್​, ಕೆಲವೆಡೆ ಬಿರುಗಾಳಿ ಸಹಿತ ಮಳೆ ಮುನ್ಸೂಚನೆ

Share It

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಚುರುಕುಗೊಂಡಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉಳಿದ ವಿವಿಧ ಜಿಲ್ಲೆಗಳಲ್ಲಿಯೂ ಭಾರಿ ಮಳೆ ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿರಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉಳಿದಂತೆ ಬೆಳಗಾವಿ, ರಾಯಚೂರು, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬಿರುಗಾಳಿಯೊಂದಿಗೆ ಭಾರಿ ಮಳೆ: ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಹೆಚ್ಚಿರಲಿದ್ದು, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಬಲವಾದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Share It

You cannot copy content of this page