ಸುದ್ದಿ

ವಿನಯ್​ ಕುಲಕರ್ಣಿ ಶಿಕ್ಷೆ ಅಮಾನತು: ಶಾಸಕ ಸ್ಥಾನ ಮರುಸ್ಥಾಪಿಸಿ ವಿಧಾನಸಭೆ ಸಚಿವಾಲಯ ಆದೇಶ

Share It

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೀವಾವಧಿಗೆ ಶಿಕ್ಷೆಗೆ ಗುರಿಯಾಗಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದ ಧಾರವಾಡ ಗ್ರಾಮೀಣ ವಿಧಾನಸಭಾ ಶಾಸಕ ವಿನಯ್ ಕುಲಕರ್ಣಿ ಶಾಸಕ ಸ್ಥಾನವನ್ನು ಮರು ಸ್ಥಾಪನೆ ಮಾಡಿ ವಿಧಾನಸಭೆ ಸಚಿವಾಲಯ ಆದೇಶ ಹೊರಡಿಸಿದೆ.

ಯೋಗೇಶ್​ಗೌಡ​ ಗೌಡ ಕೊಲೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್​ ಅಮಾನತ್ತಿನಲ್ಲಿಟ್ಟು, ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಮರುಸ್ಥಾಪನೆಗೊಂಡಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ. ಕೆ. ವಿಶಾಲಾಕ್ಷಿ ಪ್ರಕಟಣೆ ಹೊರಡಿಸಿದ್ದಾರೆ. ಈ ಆದೇಶದಿಂದ ವಿನಯ್ ಕುಲಕರ್ಣಿ ಅವರು ಮತ್ತೆ ಶಾಸಕರಾಗಿ ಮುಂದುವರಿಯಲಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

2016ರ ಜೂನ್ 15ರಂದು ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಿಮ್​ನಲ್ಲಿ ಯೋಗೀಶ್​ಗೌಡ ಕೊಲೆ ನಡೆದಿತ್ತು. ಆರಂಭದಲ್ಲಿ ಧಾರವಾಡ ಉಪನಗರ ಪೊಲೀಸರೇ ತನಿಖೆ ನಡೆಸಿದ್ದರು. ಬಳಿಕ ಸರಿಯಾಗಿ ತನಿಖೆ ಆಗುತ್ತಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದರು. 2019ರಲ್ಲಿ ವಿನಯ್ ಕುಲಕರ್ಣಿ ಸಾಕ್ಷ್ಯ ನಾಶಪಡಿಸಿದ್ದಾರೆ ಎಂದು ಯೋಗೇಶ್​ಗೌಡ ಕುಟುಂಬಸ್ಥರು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಟ್ಟಿದ್ದರು.

ಸಿಬಿಐ ಅಧಿಕಾರಿಗಳು ಸಲ್ಲಿಸಿರುವ ಆರೋಪ ಪಟ್ಟಿಯನ್ನು ಪರಿಗಣಿಸಿ ಸುದೀರ್ಘ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿ ಸೇರಿ 17 ಮಂದಿಯನ್ನು ದೋಷಿಗಳನ್ನಾಗಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ವಿಧಾನಸಭೆ ಸಚಿವಾಲಯ ವಿನಯ್​ ಕುಲಕರ್ಣಿ ಅವರ ಶಾಸಕ ಸ್ಥಾನ ರದ್ದುಪಡಿಸಿ ಆದೇಶಿಸಿತ್ತು. ಇದೀಗ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್​ ಅಮಾನತ್ತಿನಲ್ಲಿಟ್ಟಿದ್ದು, ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಅವರ ಶಾಸಕ ಸ್ಥಾನವನ್ನು ಮರುಸ್ಥಾಪಿಸಿ ಆದೇಶಿಸಲಾಗಿದೆ.


Share It

You cannot copy content of this page