ಬೆಂಗಳೂರು: ಬಗರ್ ಹುಕುಂ ಜಮೀನು ಮಂಜೂರಾತಿಯಲ್ಲಿ ಅಕ್ರಮವೆಸಗಿದ ಆರೋಪ ಸಂಬಂಧ ಬಂಧನಕ್ಕೆ ಒಳಗಾಗಿದ್ದ ಬೇಲೂರಿನ ಮಾಜಿ ಶಾಸಕ ಕೆ.ಎಸ್.ಲಿಂಗೇಶ್ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಕೆ.ಎಸ್.ಲಿಂಗೇಶ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ನೀಡಿದೆ. ಅಲ್ಲದೆ, ಅರ್ಜಿದಾರರು 2 ಲಕ್ಷ ರೂ. ಮೌಲ್ಯದ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತದ ಶ್ಯೂರಿಟಿ ಒದಗಿಸಬೇಕು. ವಿಚಾರಣಾ ನ್ಯಾಯಾಲಯಕ್ಕೆ ನಿಗದಿಯಂತೆ ವಿಚಾರಣೆಗೆ ಹಾಜರಾಗಬೇಕು, ಯಾವುದೇ ಸಾಕ್ಷ್ಯ ನಾಶ ಮಾಡುವಂತಿಲ್ಲ ಮತ್ತು ಬೆದರಿಕೆ ಹಾಕುವಂತಿಲ್ಲ. ತನಿಖಾಧಿಕಾರಿ ಕರೆದಾಗ ಹಾಜರಾಗಿ, ತನಿಖೆಗೆ ಅಗತ್ಯ ದಾಖಲೆಗಳನ್ನು ಒದಗಿಸಬೇಕು ಮತ್ತು ಕೋರ್ಟ್ ಅನುಮತಿ ಇಲ್ಲದೇ ವ್ಯಾಪ್ತಿಯನ್ನು ಬಿಟ್ಟು ಹೋಗುವಂತಿಲ್ಲ ಎಂಬ ಷರತ್ತುಗಳನ್ನು ವಿಧಿಸಿದೆ. ಜೊತೆಗೆ ಷರತ್ತುಗಳನ್ನು ಉಲ್ಲಂಘಿಸಿದರೆ ಜಾಮೀನು ಸಹಜವಾಗಿಯೇ ರದ್ದಾಗಲಿದೆ ಎಂದು ಆದೇಶದಲ್ಲಿ ಎಚ್ಚರಿಕೆ ನೀಡಿದೆ.
ಅರ್ಜಿದಾರರನ್ನು ವಶಕ್ಕೆ ಪಡೆದು 40 ದಿನಗಳಾಗಿದ್ದು, ಅವರು ಅಂದಿನಿಂದ ಕಸ್ಟಡಿಯಲ್ಲಿದ್ದಾರೆ. ಅರ್ಜಿದಾರರು ಓಪನ್ ಹಾರ್ಟ್ ಸರ್ಜರಿಗೆ ಒಳಗಾಗಿದ್ದು, ಕಾರಾಗೃಹದಲ್ಲಿ ಅವರ ಆರೋಗ್ಯ ಕ್ಷಿಣಿಸುತ್ತಿದೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಮತ್ತು ಸಿಐಡಿ ಅಧಿಕಾರಿಗಳು ಎಲ್ಲ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಚಿನ ವಿಚಾರಣೆಗೆ ಅರ್ಜಿದಾರರ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಜಾಮೀನು ಮಂಜೂರು ಮಾಡಲಾಗುತ್ತಿದೆ ಎಂದು ನ್ಯಾಯಾಲಯ ಹೇಳಿದೆ.
ಈಗಾಗಲೇ ಪ್ರಕರಣದ 2, 6, 8 ನೇ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ. 3, 4, 5ನೇ ಆರೋಪಿಗಳಿಗೆ ಜಾಮೀನು ದೊರೆತಿದೆ. ಹಾಗಾಗಿ ಕಠಿಣ ಷರತ್ತುಗಳೊಂದಿಗೆ ಅರ್ಜಿದಾರರಿಗೆ ಜಾಮೀನು ನೀಡಲಾಗುತ್ತಿದೆ ಎಂದು ನ್ಯಾಯಾಲಯ ತಿಳಿಸಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ತನಿಖೆ ಕೋರಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಜಾಗೊಂಡ ಎರಡು ವರ್ಷಗಳ ಬಳಿಕ ಅರ್ಜಿದಾರರನ್ನು ವಶಕ್ಕೆ ಪಡೆಯಲಾಗಿದೆ. ಅವರನ್ನು ಕಸ್ಟಡಿಯಲ್ಲಿಟ್ಟುಕೊಳ್ಳುವ ಅಗತ್ಯವಿಲ್ಲ. ಈಗಾಗಲೇ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿರುವುದರಿಂದ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬಹುದು ಎಂದು ಕೋರಿದರು.

