ಬೆಂಗಳೂರು: ಏಕಗ್ರಾಮ ಕುಡಿಯುವ ನೀರಿನ ಯೋಜನೆಗಳಡಿ ಕೈಗೊಂಡ ಕಾಮಗಾರಿಗಳ ಪೈಕಿ ಶೇ.80ರಷ್ಟು ಪೂರ್ಣಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ವಿಧಾನಸೌಧದಲ್ಲಿಂದು ನೂತನವಾಗಿ ನೇಮಕಗೊಂಡಿರುವ 53 ಕಿರಿಯ ಮತ್ತು ಸಹಾಯಕ ಎಂಜಿನಿಯರುಗಳಿಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದ ಅವರು, ಬಹುಗ್ರಾಮ ಕುಡಿಯುವ ನೀರಿನ ಶೇ. 40-45ರಷ್ಟು ಕಾಮಗಾರಿ ಇನ್ನೂ ಆಗಬೇಕಿಗಾಗಿದೆ. ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದರು.
ರಾಜ್ಯದ ಎಲ್ಲ ಗ್ರಾಮಗಳಿಗೂ ಮೇಲ್ಮೈ ನೀರಿನಿಂದ ಶುದ್ಧ ಕುಡಿಯುವ ನೀರು ಪೂರೈಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಮುಂದಿನ 30 ವರ್ಷಗಳ ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮ ರೂಪಿಸಲಾಗಿದೆ ಎಂದರು.
ಕೊಳವೆ ಬಾವಿಗಳು, ತೆರೆದ ಬಾವಿಗಳು ಬತ್ತಿ ಹೋಗುತ್ತವೆ. ಹೀಗಾಗಿ ಶಾಶ್ವತ ಜಲ ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಮತ್ತು ಆ ಮೂಲಗಳಿಂದ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

