ಭದ್ರಾವತಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಕೆರೆಗೆ ಇಳಿದಿದ್ದ ಪದವಿ ವಿದ್ಯಾರ್ಥಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಭದ್ರಾವತಿ ತಾಲೂಕಿನ ದೇವನಹಳ್ಳಿ ಸಮೀಪ ನಡೆದಿದೆ.
ಮೃತರನ್ನು ರಾಕೇಶ್ ಎಂದು ಗುರುತಿಸಲಾಗಿದೆ. ಅವರು ಪದವಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ರಂಗನಾಥಪುರ ಪ್ರದೇಶದಿಂದ ಗಣೇಶ ಮೂರ್ತಿ ವಿಸರ್ಜನೆಗಾಗಿ ಭಕ್ತರು ದೇವನಹಳ್ಳಿ ರಸ್ತೆಯಲ್ಲಿರುವ ಚೌಡೇಶ್ವರಿ ದೇವಸ್ಥಾನ ಸಮೀಪದ ಕೆರೆಗೆ ತೆರಳಿದ್ದರು.
ಈ ವೇಳೆ ಗಣೇಶ ಮೂರ್ತಿಯನ್ನು ವಿಸರ್ಜಿಸಲು ರಾಕೇಶ್ ಕೆರೆಗೆ ಇಳಿದಿದ್ದರು ಎನ್ನಲಾಗಿದೆ. ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಅದು ವಾಲಿದಾಗ ಆಯತಪ್ಪಿ ರಾಕೇಶ್ ನೀರಿನಲ್ಲಿ ಮುಳುಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ.
ಘಟನೆ ನಡೆದ ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದು, ಅಗ್ನಿಶಾಮಕ ಸಿಬ್ಬಂದಿಗೂ ಮಾಹಿತಿ ನೀಡಲಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

