ಅಪರಾಧ ಸುದ್ದಿ

ಬೆಂಗಳೂರು: ಐದು ಪೊಲೀಸ್ ಕಮಿಷನರೇಟ್ ವಿಂಗಡನೆಗೆ ಅಸ್ತು

Share It

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ರಚನೆಯಾಗಿರುವ ಹಿನ್ನೆಲೆಯಲ್ಲಿ, ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಅಪರಾಧ ನಿಯಂತ್ರಣ, ಸಂಚಾರ ನಿರ್ವಹಣೆ ಹಾಗೂ ಸಾರ್ವಜನಿಕ ಸುರಕ್ಷತೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತಾಲಯವನ್ನು ಸಮಗ್ರವಾಗಿ ಪುನರ್‌ಸಂಘಟಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಸದ್ಯ ಚಾಲ್ತಿಯಲ್ಲಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತಾಲಯವನ್ನು ಮುಖ್ಯ ಪೊಲೀಸ್ ಆಯುಕ್ತರ (Chief Commissioner of Police) ಒಟ್ಟಾರೆ ಮೇಲ್ವಿಚಾರಣೆಯಡಿಯಲ್ಲಿ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಮತ್ತು ಕೇಂದ್ರ ಎಂಬ ಐದು ಪ್ರತ್ಯೇಕ ಪೊಲೀಸ್ ಆಯುಕ್ತಾಲಯಗಳಾಗಿ ವಿಭಜಿಸಿ ಪುನರ್ ರಚಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಪ್ರಸ್ತುತ ಇರುವ ಪೊಲೀಸ್ ಆಯುಕ್ತರ ಹುದ್ದೆಯನ್ನು ‘ಮುಖ್ಯ ಪೊಲೀಸ್ ಆಯುಕ್ತರು’ ಎಂದು ಉನ್ನತೀಕರಿಸಲಾಗುವುದು. ಜಂಟಿ ಅಥವಾ ಅಪರ ಪೊಲೀಸ್ ಆಯುಕ್ತರು (ಸಂಚಾರ) ಹುದ್ದೆಯನ್ನು ‘ಪೊಲೀಸ್ ಆಯುಕ್ತರು (ಸಂಚಾರ)’ ಎಂದು ಮರುಪದನಾಮೀಕರಿಸಲಾಗುವುದು. ಈ ಯೋಜನೆಗೆ ಅಗತ್ಯವಿರುವಂತೆ ಒಟ್ಟು 1,022 ಹೊಸ ಹುದ್ದೆಗಳನ್ನು ಸೃಜಿಸಲು ಆರ್ಥಿಕ ಇಲಾಖೆಯು ಸಹಮತಿ ನೀಡಿದ್ದು, ಸಚಿವ ಸಂಪುಟ ಅನುಮೋದಿಸಿದೆ. ಪ್ರಸ್ತಾವಿತ ಘಟಕಗಳಲ್ಲಿ ಅಪರಾಧ ಪ್ರಕರಣಗಳ ನಿರ್ವಹಣೆ, ಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಸಾರ್ವಜನಿಕ ಭದ್ರತೆಗಾಗಿ ಒಟ್ಟು 6,550 ಹುದ್ದೆಗಳ ಅಗತ್ಯವಿದ್ದು, ಹೊಸ ಹುದ್ದೆಗಳ ಜೊತೆಗೆ ಪ್ರಸ್ತುತ ಚಾಲ್ತಿಯಲ್ಲಿರುವ ಹುದ್ದೆಗಳನ್ನು ಮರು ನಿಯೋಜಿಸಿ ವ್ಯವಸ್ಥೆಯನ್ನು ಬಲಪಡಿಸಲಾಗುವುದು. ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

ಸಂಚಾರ ನಿರ್ವಹಣೆಗೆ ಅನುಕೂಲವಾಗುವಂತೆ ಕೇಂದ್ರ ಸಂಚಾರ ವಿಭಾಗಕ್ಕೆ 2, ಪಶ್ಚಿಮ ಸಂಚಾರ ವಿಭಾಗಕ್ಕೆ 1, ಉತ್ತರ ಸಂಚಾರ ವಿಭಾಗಕ್ಕೆ 1 ಮತ್ತು ಪಶ್ಚಿಮ ಕಾನೂನು ಸುವ್ಯವಸ್ಥೆ ವಿಭಾಗಕ್ಕೆ 2 ರಂತೆ ಒಟ್ಟು 6 ಹೊಸ ಎಸಿಪಿ (ACP) ಹುದ್ದೆಗಳನ್ನು ಸೃಜಿಸಲಾಗುವುದು. ಪ್ರತಿಯೊಂದು ಎಸಿಪಿ ಕಚೇರಿಗೆ ತಲಾ 5 ಕಾರ್ಯಕಾರಿ ಹುದ್ದೆಗಳನ್ನು ಹೊಸದಾಗಿ ನೀಡಲಾಗುವುದು. ಆಡಳಿತಾತ್ಮಕ ವೆಚ್ಚವನ್ನು ಸರಳೀಕರಿಸಲು, ಪ್ರಸ್ತುತ ಇರುವ ಸಿಎಆರ್ (CAR) ಘಟಕಗಳಿಂದಲೇ ಹುದ್ದೆಗಳನ್ನು ಮರುನಿಯೋಜಿಸಿ ಪೂರ್ವ ವಿಭಾಗಕ್ಕಾಗಿ ಹೊಸ ಸಿಎಆರ್ ಘಟಕವನ್ನು ರಚಿಸಲಾಗುವುದು ಎಂದೂ ಸಚಿವರು ತಿಳಿಸಿದ್ದಾರೆ.


Share It

You cannot copy content of this page