ಬೆಂಗಳೂರು: ಈಶಾನ್ಯ ಮಾರುತಗಳ ಪ್ರಭಾವ ಹಾಗೂ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಅಕ್ಟೋಬರ್ 22ರ ವರೆಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರು ನಗರ ಸೇರಿ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಕಡಲ ತೀರದ ಈ ಭಾಗಗಳಲ್ಲಿ ಆಗಾಗ್ಗೆ ಬಿರುಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಮೀನುಗಾರರು ಮತ್ತು ಸಾರ್ವಜನಿಕರು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಅದೇ ರೀತಿ ಬೆಂಗಳೂರು ನಗರ, ಗ್ರಾಮಾಂತರ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ. ಇದರೊಂದಿಗೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ರಾಮನಗರದಲ್ಲೂ ಗುಡುಗು ಸಹಿತ ಭಾರಿ ಮಳೆ ಸುರಿಯುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಂಭವವಿದ್ದು, ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
