ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದ ತನಿಖೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ಅವರಿಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌಖಿಕ ಸೂಚನೆ ನೀಡಿದ್ದಾರೆ.
ಬಹುತೇಕ ಇಂದು ಅಥವಾ ನಾಳೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ಸಾಧ್ಯತೆ ಇದೆ. ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ನಂತರ, ರಾಜ್ಯದ ಕೈ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮತ್ತು ವಿವಿಧ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿವೆ.
ಮತ್ತೊಂದೆಡೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಹಗರಣದಲ್ಲಿ ತಮ್ಮ ಬ್ಯಾಂಕ್ ಅಧಿಕಾರಿಗಳ ತಪ್ಪೇನೂ ಇಲ್ಲ ಎಂದು ಸಿಬಿಐಗೆ ದೂರು ನೀಡಿದೆ. ಈ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ಅವರ ಮೇಲಿನ ಆರೋಪಗಳ ಬಗ್ಗೆ ಕೂಲಂಕಷ ಪರಿಶೀಲಿಸಿ ತನಿಖೆ ನಡೆಸಲು ಅವಕಾಶ ಕಲ್ಪಿಸಿಕೊಡಲು ಇನ್ನೆರಡು ದಿನಗಳ ಒಳಗಾಗಿ ರಾಜೀನಾಮೆ ನೀಡಿ ಎಂದು ಮುಖ್ಯಮಂತ್ರಿಗಳು ಮೌಖಿಕ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಒಂದು ವೇಳೆ ಈ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆದರೆ ರಾಜ್ಯ ಸರ್ಕಾರಕ್ಕೆ ಭ್ರಷ್ಟಾಚಾರದ ಕಳಂಕ ಅಂಟಿಕೊಳ್ಳಲಿದೆ. ಕಾರಣ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ಹಣವನ್ನು ತೆಲಂಗಾಣ ರಾಜ್ಯದ ಚುನಾವಣಾ ಖರ್ಚಿಗೆ ಕಳುಹಿಸಲಾಗಿತ್ತು ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.
ಈ ಹಿನ್ನೆಲೆಯಲ್ಲಿ ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಸರ್ಕಾರ ರಚನೆಗೆ ಹಗರಣ ಪೆಟ್ಟು ನೀಡುವ ಮುನ್ಸೂಚನೆ ಇರುವ ಕಾರಣ ಸಚಿವ ಬಿ.ನಾಗೇಂದ್ರ ಅವರು ಮೊದಲು ರಾಜೀನಾಮೆ ನೀಡಬೇಕು ಎಂದು ಎಐಸಿಸಿ ಆದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ಅವರಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಜೂನ್ 4 ರಂದು ಲೋಕಸಭಾ ಚುನಾವಣೆಯ ಮತ ಎಣಿಕೆ ಮುನ್ನವೇ ಸಚಿವ ಬಿ.ನಾಗೇಂದ್ರ ರಾಜೀನಾಮೆ ಕೊಡಲು ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚಿಸಿರುವುದು ಸ್ಪಷ್ಟವಾಗಿದೆ.
