ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಿಡುಗಡೆ ಮಾಡಿದ್ದ ಆರೋಪಪಟ್ಟಿಗಳಿಗೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣದ ವಿಚಾರಣೆಗೆ ಖುದ್ದು ರಾಹುಲ್ ಗಾಂಧಿ ಇಂದು ಬೆಂಗಳೂರಿನ ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ.
ನ್ಯಾಯಾಲಯಕ್ಕೆ ಹಾಜರಾಗಲು ನೆನ್ನೆ ತಡರಾತ್ರಿ ದೆಹಲಿಯಿಂದ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ.ಶಿವಕುಮಾರ್ ಬರಮಾಡಿಕೊಂಡರು. ಇಂದು 10.45 ಕ್ಕೆ ನ್ಯಾಯಾಲಯದ ಮುಂದೆ ಹಾಜರಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಲಿದ್ದಾರೆ.
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಹಿಂದಿನ ಸಿಎಂ ಆಯ್ಕೆ, ಸಚಿವರ ಆಯ್ಕೆಗೆ ಸಾವಿರಾರು ಕೋಟಿ ಹಣ ಪಡೆದಿತ್ತು ಎಂಬ ಆರೋಪವನ್ನು ಮಾಡಲಾಗಿತ್ತು. ಈ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಆ ಪ್ರಕರಣದ ವಿಚಾರಣೆಯಲ್ಲಿ ರಾಹುಲ್ ಗಾಂಧಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಆದೇಶಿಸಿತ್ತು.
ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರ ಜತೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ಸಿಎಂ ಮತ್ತು ಡಿಸಿಎಂ ಸ್ವತಃ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಹೀಗಾಗಿ, ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ರಾಹುಲ್ ಗಾಂಧಿ ಅಂದು ಹಾಜರಾಗದ ಕಾರಣ ಅವರನ್ನು ಖುದ್ದು ಹಾಜರಾಗುವಂತೆ ನ್ಯಾಯಾಲಯ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಇಂದು ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

