ಬೆಳಗಾವಿ: ನಮೂನೆ 50, 53, 57ಕ್ಕೆ ಸಂಬಂಧಿಸಿದಂತೆ ಅಕ್ರಮ-ಸಕ್ರಮಗೊಳಿಸಿ ಸಾಗುವಳಿ ಚೀಟಿ ನೀಡಲು ಕೋರಿ ಲಕ್ಷಾಂತರ ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಅರ್ಹರಿಗೆ ಮಾತ್ರ ಜಮೀನು ಮಂಜೂರು ಮಾಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಈ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಅವರು, “ಈ ಹಿಂದೆ ಬಗರ್ ಹುಕುಂ ಸಾಗುವಳಿ ಚೀಟಿ ನೀಡುವ ವೇಳೆ ಅನರ್ಹರಿಗೂ ಜಮೀನು ಮಂಜೂರು ಮಾಡಲಾಗಿದೆ. ನಿಯಮ ಮೀರಿ ಸಾಕಷ್ಟು ಅಕ್ರಮ ನಡೆಸಲಾಗಿದೆ. ಆದರೆ ಈ ಬಾರಿ ಅಂತಹ ಯಾವುದೇ ಪ್ರಹಸನಗಳಿಗೆ ಆಸ್ಪದ ಇಲ್ಲ. ಬಗರ್ ಹುಕುಂ ಸಭೆಯ ಬಯೋ ಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿ ಪಡೆಯಬೇಕು” ಎಂದು ತಾಕೀತು ಮಾಡಿದರು.
ಬಗರ್ ಹುಕುಂ ಅರ್ಜಿ ವಿಲೇವಾರಿ ಸಂದರ್ಭದಲ್ಲಿ ಅಧಿಕಾರಿಗಳು ಯಾವುದೇ ಪ್ರಭಾವಿಗಳ ಅಥವಾ ರಾಜಕೀಯ ಪಕ್ಷದ ನಾಯಕರಿಗೆ ಅನುಕೂಲವಾಗುವಂತೆ ವರ್ತಿಸಬಾರದು, ಬದಲಾಗಿ ಬಡ ಜನರಿಗೆ ಮತ್ತು ಅರ್ಹರಿಗೆ ನ್ಯಾಯ ಒದಗಿಸಲು ಬದ್ಧರಾಗಿರಬೇಕು. ಮುಂದಿನ 6 ತಿಂಗಳಲ್ಲಿ ಅರ್ಹರಿಗೆ ಸಾಗುವಳಿ ಚೀಟಿ ನೀಡಬೇಕು,ಸಾಗುವಳಿ ಚೀಟಿ ನೀಡುತ್ತಿದ್ದಂತೆ ಹೊಸ ಸರ್ವೇ ನಂಬರ್ ಪೋಡಿಯನ್ನೂ ಸಹ ಒದಗಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬೀಟ್ ಆ್ಯಪ್ ಮೂಲಕ ಸರ್ಕಾರಿ ಜಮೀನು ರಕ್ಷಣೆ: ಸರ್ಕಾರಿ ಒತ್ತುವರಿ ತೆರವುಗೊಳಿಸಲು ಈಗಾಗಲೇ ಅಧಿಕಾರಿಗಳಿಗೆ ಬೀಟ್ ಆ್ಯಪ್ ನೀಡಗಿದೆ. ಇದರ ಸಹಾಯದಿಂದ ಸರ್ಕಾರಿ ಆಸ್ತಿಯನ್ನು ಉಳಿಸುವ ಕೆಲಸ ಆಗಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಈ ಬಗ್ಗೆ ಗಮನ ಸೆಳೆದ ಅವರು, “ಎಲ್ಲಾ ಜಿಲ್ಲೆಯಲ್ಲೂ ಸರ್ಕಾರಿ ಭೂ ಒತ್ತುವರಿ ದೊಡ್ಡ ಸಮಸ್ಯೆಯಾಗಿದೆ. ಮುಖ್ಯಂತ್ರಿಗಳಿಗೆ ಉತ್ತರ ನೀಡುವುದು ಕಷ್ಟವಾಗಿದೆ. ಹೀಗಾಗಿ ಮೊದಲು ನಮ್ಮ ದಾಖಲೆಯಲ್ಲಿರುವ ಸರ್ಕಾರಿ ಭೂಮಿಯನ್ನು ಗುರುತಿಸಿ ರಕ್ಷಿಸುವ ಕೆಲಸ ಆಗಬೇಕು. ಸರ್ಕಾರಿ ಭೂಮಿಗಳನ್ನು ಗುರುತಿಸಲು ” ಬೀಟ್” ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಗ್ರಾಮ ಲೆಕ್ಕಾಧಿಕಾರಿಗಳು ಈ ಆ್ಯಪ್ ಮೂಲಕ ಸರ್ಕಾರಿ ಭೂಮಿಯನ್ನು ಗುರುತಿಸಿ ಒತ್ತುವರಿ ತೆರವಿಗೆ ತಹಶೀಲ್ದಾರ್ ಗೆ ಪ್ರಸ್ತಾಪ ಸಲ್ಲಿಸಬೇಕು. ಅಲ್ಲದೆ, ಪ್ರತಿ ಮೂರು ತಿಂಗಳಿಗೊಮ್ಮೆ ತನ್ನ ವ್ಯಾಪ್ತಿಯ ಸರ್ಕಾರಿ ಭೂಮಿಗೆ ತೆರಳಿ ಪರಿಶೀಲಿಸಿ ಆ್ಯಪ್‌ನಲ್ಲಿ ದಾಖಲಿಸಬೇಕು ಎಂದು ಸೂಚಿಸಿದರು.
ಅಲ್ಲದೆ, ಇಂದಿನ ಚರ್ಚೆಯ ಅಜೆಂಡಾದಲ್ಲಿದ್ದ ಕೆಲವು ವಿಚಾರಗಳ ಬಗ್ಗೆ ಹೆಚ್ಚು ಚರ್ಚೆ ಮಾಡಲು ಸಾಧ್ಯವಾಗಿಲ್ಲ. ಹಾಗೆಂದು ಯಾವ ಕೆಲಸವೂ ನಿಲ್ಲುವಂತಿಲ್ಲ. ಜೊತೆಗೆ, ನಮ್ಮ ಮೇಲೆ ಜನರ ನಿರೀಕ್ಷೆ ಹೆಚ್ಚಿದೆ. ಹೀಗಾಗಿ ನಾನು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು. ಕೆಲವರಿಗೆ ಕೆಲಸದ ಹೊರೆ ಹೆಚ್ಚಾಗಿದೆ ಎಂಬ ಭಾವನೆ ಇದೆ. ಆದರೆ, ನಾವು ಕರ್ತವ್ಯ ವ್ಯಾಪ್ತಿ ಬಿಟ್ಟು ಯಾರಿಗೂ ಯಾವ ಕೆಲಸವನ್ನೂ ನೀಡಿಲ್ಲ. ಅಲ್ಲದೆ, ಜನಪರ ಸೇವೆ ನಮ್ಮ ವ್ಯಯಕ್ತಿಕ ಹಾಗೂ ಸಾಮೂಹಿಕ ಜವಾಬ್ದಾರಿ. ಜನರಿಗೆ ಸಹಾಯವಾಗುವ ನಿಟ್ಟಿನಲ್ಲಿ ಅಳಿಲು ಸೇವೆಯನ್ನಾದರೂ ಮಾಡಿದರೆ ನಮ್ಮ ವೃತ್ತಿ ಜೀವನ ಸಾರ್ಥಕ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು.

