ನವದೆಹಲಿ: ಅಬಕಾರಿ ಹಗರಣ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ವಿಚಾರಣೆ ದೆಹಲಿ ಹೈಕೋರ್ಟ್ ನಲ್ಲಿ ಇಂದು ಅಂತ್ಯಗೊಂಡಿದೆ.
ಆದರೆ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡುವ ಬಗ್ಗೆ ಮುಂದಿನ ವಾರ ದೆಹಲಿ ಹೈಕೋರ್ಟ್ ಆದೇಶ ನೀಡುವ ಸಾಧ್ಯತೆ ಇದೆ. ಹೀಗಾಗಿ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ಮುಗಿದಿದ್ದರೂ ತೀರ್ಪನ್ನು ದೆಹಲಿ ಹೈಕೋರ್ಟ್ ಕಾಯ್ದಿರಿಸಿದೆ. ಪ್ರಕರಣದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ನಿನ್ನೆಯಷ್ಟೇ ಕೆಳಹಂತದ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಮಂಜೂರಾಗಿತ್ತು.
ಆದರೆ, ಇಂದು ದೆಹಲಿ ಹೈಕೋರ್ಟ್ ಗೆ ಕೇಂದ್ರ ಜಾರಿ ನಿರ್ದೇಶನಾಲಯ ಪ್ರತಿವಾದಿಯಾಗಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಿರುವ ಜಾಮೀನಿಗೆ ಆಕ್ಷೇಪ ವ್ಯಕ್ತಪಡಿಸಿತು. ಇದರಿಂದ ಹೈಕೋರ್ಟ್ ಅರವಿಂದ ಕೇಜ್ರಿವಾಲ್ ಅವರಿಗೆ ಕೆಳಹಂತದ ನ್ಯಾಯಾಲಯ ನೀಡಿದ್ದ ಜಾಮೀನು ರದ್ದುಗೊಳಿಸಿತ್ತು.
ಕೇಜ್ರಿವಾಲ್ ಪರ ವಕೀಲರು ದೆಹಲಿ ಹೈಕೋರ್ಟ್ ಮುಂದೆ ಮೇಲ್ಮನವಿ ಸಲ್ಲಿಸಿ ತಮ್ಮ ಕಕ್ಷಿದಾರನಿಗೆ ಜಾಮೀನು ನೀಡಬೇಕೆಂದು ಮೇಲ್ಮನವಿ ಸಲ್ಲಿಸಿ ವಾದ ಮಂಡಿಸಿದ್ದರು. ಈ ಬಗ್ಗೆ ಇ.ಡಿ ಪರ ವಕೀಲರ ಪ್ರತಿವಾದ ಆಲಿಸಿದ ದೆಹಲಿ ಹೈಕೋರ್ಟ್ ನ್ಯಾಯಾಧೀಶರು ವಿಚಾರಣೆ ಮುಗಿಸಿ ಜಾಮೀನು ಅರ್ಜಿ ಕುರಿತ ತೀರ್ಪನ್ನು ಕಾಯ್ದಿರಿಸಿದ್ದಾರೆ.
