ಬೆಂಗಳೂರು: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಡಿಸೆಂಬರ್ ೨೦ ರಿಂದ ಮೂರು ದಿನಗಳ ಕಾಲ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಇಂದು ನಡೆದಿದ್ದು, ಡಿಸೆಂಬರ್ ೨೦ ರಿಂದ ಮೂರು ದಿನಗಳ ಕಾಲ ಸಮ್ಮೇಳನ ನಡೆಸಲು ತೀರ್ಮಾನಿಸಲಾಯಿತು.
ಮಂಡ್ಯದಲ್ಲಿ ಸಮ್ಮೇಳನ ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಜಿಲ್ಲಾಡಳಿತದ ನಡುವೆ ಸಮನ್ವಯ ಸಾಧಿಸಲು ಅಧಿಕಾರಿಗಳು ಕೆಲಸ ಮಾಡಬೇಕು. ಸಮ್ಮೇಳನ ಅಚ್ಚುಕಟ್ಟಾಗಿ ನಡೆಯಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದರು.
ಸಭೆಯಲ್ಲಿ ಮಂಡ್ಯ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯುಕ್ತ ಅಜಯ್ ನಾಗಭೂಷಣ್ ಹಾಗೂ ವಿವಿಧ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

