ಬೆಂಗಳೂರು: ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡುವ ಬಗ್ಗೆ ಪ್ರಧಾನಿ ಭೇಟಿ ಮಾಡಿ ಮನವಿ ಸಲ್ಲಿಸಲು ನಾನು ಇಂದು ದೆಹಲಿಗೆ ಹೋಗುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ “ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಆಯ್ಕೆಯಾದ ಎಲ್ಲಾ 28 ಸಂಸದರ ಜೊತೆ ಇಂದು ದೆಹಲಿಯಲ್ಲಿ ಮೊದಲು ಸಭೆ ನಡೆಸಿ ಕೇಂದ್ರ ಸರ್ಕಾರಕ್ಕೆ ಕರ್ನಾಟಕದ ಅಭಿವೃದ್ಧಿ ಯೋಜನೆಗಳಿಗೆ ನೀಡಬೇಕಾದ ಅನುದಾನವನ್ನು ಬಿಡುಗಡೆ ಮಾಡಿಸಲು ಒತ್ತಾಯಿಸಬೇಕೆಂದು ಮನವಿ ಸಲ್ಲಿಸುತ್ತೇನೆ.
ಆನಂತರ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಸಿಗಬೇಕಾದ ಸೂಕ್ತ ಅನುದಾನವನ್ನು ಆದಷ್ಟು ಬೇಗನೇ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದರು.

