ಉಪಯುಕ್ತ ಸುದ್ದಿ

ಸರ್ಕಾರಿ ದಾಖಲೆಗಳನ್ನು ಮನೆಗಳಲ್ಲಿ ಇಟ್ಟುಕೊಂಡವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ :ಟಿ.ಬಿ.ಜಯಚಂದ್ರ

Share It

ತುಮಕೂರು : ಅಧಿಕಾರಿಗಳು ನಿವೃತ್ತಿಯಾದ ನಂತರವೂ ಸರ್ಕಾರಿ ದಾಖಲೆಗಳನ್ನು ಮನೆಗಳಲ್ಲಿ ಇಟ್ಟುಕೊಂಡರೆ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡುವಂತೆ ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಕಚೇರಿ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ ಸಿರಾ ತಾಲ್ಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ತಾಲ್ಲೂಕು ಕಚೇರಿ ಮಾಹಿತಿಯನ್ವಯ ಶಿರಾ ತಾಲೂಕಿನಲ್ಲಿ ಜೂನ್ 24ರಂದು ನಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ 347 ಅರ್ಜಿಗಳು ಸಲ್ಲಿಕೆಯಾಗಿದ್ದು, 47 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

ಬಾಕಿ ಉಳಿದ ಬಹುತೇಕ ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿವೆ.

ಅವುಗಳನ್ನು ವಿಲೇವಾರಿ ಮಾಡಲು ಅಗತ್ಯವಿರುವ ಕೆಲವು ದಾಖಲೆಗಳನ್ನು ಈ ಹಿಂದೆ ಸಿರಾ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸಿರುವ ತಹಶೀಲ್ದಾರರುಗಳು ಕೆಲವು ಸರ್ಕಾರಿ ದಾಖಲೆಗಳನ್ನು ಇಲಾಖೆಗೆ ಸಲ್ಲಿಸದೇ ತಮ್ಮ ಬಳಿಯೇ ಇಟ್ಟುಕೊಂಡಿರುವುದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ. ಸರ್ಕಾರಿ ದಾಖಲೆಗಳನ್ನು ತಮ್ಮ ಬಳಿ ಇಟ್ಟುಕೊಂಡು ಸಾರ್ವಜನಿಕರ ಕೆಲಸಕ್ಕೆ ಅಡ್ಡಿಯುಂಟು ಮಾಡಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಡತಗಳನ್ನು ಇಲಾಖೆಗಳಿಗೆ ಹಿಂತಿರುಗಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ಸೂಚಿಸಿದರು.

ಜನ ಸ್ಪಂದನ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಗೆ ಸಂಬಧಿಸಿದಂತೆ ಅರ್ಜಿಗಳು ಹೆಚ್ಚಾಗಿ ಸ್ವೀಕೃತವಾಗಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳು ಖುದ್ದು ಸ್ಥಳ ಪರಿಶೀಲನೆ ನಡೆಸಿ ಸಮಸ್ಯೆ ಬಗೆಹರಿಸುವಂತೆ ಮತ್ತು ನಕಾಶೆ ರಸ್ತೆ ಸರ್ವೇ ಮಾಡಿಸಿ ಒತ್ತುವರಿಯಾಗಿದ್ದರೆ ಅಂಥಹ ರಸ್ತೆಗಳನ್ನು ತೆರವು ಮಾಡಿಸುವಂತೆ ಸಚಿವರು ಸೂಚಿಸಿದರು.

ನಂತರ ಮಾತನಾಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಶಿರಾ ತಾಲೂಕಿನಲ್ಲಿ ಬೀದಿ ನಾಯಿಗಳ ಹಾವಳಿಯನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಿರಾ ನಗರ ಸಭೆ ಪೌರಾಯುಕ್ತರಿಗೆ ಸೂಚನೆ ನೀಡಿದರು. ಸರ್ಕಾರಿ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ನಕಲಿ ಸಾಗುವಳಿ ಚೀಟಿಗಳನ್ನು ಕೊಟ್ಟಿರುವ ಬಗ್ಗೆ ದೂರುಗಳು ಕೇಳಿ ಬಂದಿದ್ದು ಅವುಗಳನ್ನು ಪರಿಶೀಲಿಸಲು ವಿಶೇಷ ತಂಡವನ್ನು ಜಿಲ್ಲೆಗೆ ಕರೆಸಲಾಗುವುದು ಎಂದು ಅಧಿಕಾರಿಗೆ ಎಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಜಂಟಿಯಾಗಿ ರೈತರ ಬೆಳೆ ಸಮೀಕ್ಷೆ ಬಗ್ಗೆ ವ್ಯಾಪಕ ಪ್ರಚಾರ ಕೈಗೊಂಡು ಹೆಚ್ಚು ರೈತರು ತಮ್ಮ ಬೆಳೆಗಳನ್ನು ನೋಂದಾಯಿಸಿಕೊಳ್ಳುವಂತೆ ಅರಿವು ಮೂಡಿಸಬೇಕು. ಜಿಲ್ಲೆಯ ಎಲ್ಲಾ ರೈತರಿಗೂ ಈ ಯೋಜನೆಯನ್ನು ತಲುಪಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಶೀಲ್ದಾರ್ ದತ್ತಾತ್ರೇಯ ಗಾದ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಅನಂತರಾಜು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


Share It

You cannot copy content of this page