ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ!
ಬೆಂಗಳೂರು:
ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ ನಡೆದಿದೆ. ಮುಂಜಾನೆ 5 ಗಂಟೆಗೆ ಗುಂಡಿನ ದಾಳಿ ಸಂಭವಿಸಿದೆ. ಬಾಂದ್ರಾದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಹೊರಗೆ 4 ಸುತ್ತಿನ ಗುಂಡಿನ ದಾಳಿ ನಡೆಸಲಾಗಿದೆ. ಬೆಳಗಿನ ಜಾವ ಇಬ್ಬರು ಅಪರಿಚಿತರು ಈ ಈ ಗುಂಡಿನ ದಾಳಿ ನಡೆಸಿದ್ದಾರೆ.
ಇಬ್ಬರು ಶೂಟರ್‌ಗಳು ಬೈಕ್‌ನಲ್ಲಿ ಬಂದು ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಸದ್ಯಕ್ಕೆ ಗಾಯಗೊಂಡಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಸಲ್ಮಾನ್ ಖಾನ್ ನಿವಾಸಕ್ಕೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ಈ ಗುಂಡಿನ ದಾಳಿಯ ನಂತರ ಮುಂಬೈ ಕ್ರೈಂ ಬ್ರಾಂಚ್ ಜೊತೆಗೆ ಬಾಂದ್ರಾ ಪೊಲೀಸ್ ತಂಡವು ಸ್ಥಳಕ್ಕೆ ತಲುಪಿದೆ. ಅಲ್ಲದೆ ವಿಧಿವಿಜ್ಞಾನ ತಂಡವೂ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ. ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ರಸ್ತೆಯ ಎರಡೂ ಬದಿಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಡಿಸಿಪಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರು ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಅನೇಕ ಬಾರಿ ಬೆದರಿಕೆ ಹಾಕಿದ್ದರು. ಇತ್ತೀಚೆಗೆ, ಲಾರೆನ್ಸ್ ಬಿಷ್ಣೋಯ್ ಕೆನಡಾದಲ್ಲಿರುವ ನಟ-ಗಾಯಕ ಗಿಪ್ಪಿ ಗ್ರೆವಾಲ್ ಅವರ ನಿವಾಸದ ಮೇಲೂ ದಾಳಿ ನಡೆಸಿದ್ದರು.
2023 ರಲ್ಲಿ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಸಲ್ಮಾನ್ ಕಚೇರಿಗೆ ಬೆದರಿಕೆ ಇಮೇಲ್ ಕಳುಹಿಸಲಾಗಿತ್ತು. ಲಾರೆನ್ಸ್ ಬಿಷ್ಣೋಯ್ ಬೆದರಿಕೆಯ ನಂತರ ಮುಂಬೈ ಪೊಲೀಸರು ಸಲ್ಮಾನ್ ಖಾನ್ ಭದ್ರತೆಯನ್ನು ಹೆಚ್ಚಿಸಿದ್ದರು. ಸದ್ಯ ಸಲ್ಮಾನ್ ಗೆ ವೈ ಪ್ಲಸ್ ಭದ್ರತೆ ನೀಡಲಾಗಿದೆ.
ಈಗ ನಾನು ಗೂಂಡಾ ಅಲ್ಲ, ಆದರೆ ಸಲ್ಮಾನ್ ಖಾನ್ ಅವರನ್ನು ಕೊಂದು ಗೂಂಡಾ ಆಗುತ್ತೇನೆ. ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ನನ್ನ ಜೀವನದ ಗುರಿ. ಭದ್ರತೆ ತೆಗೆದರೆ ಸಲ್ಮಾನ್ ಖಾನ್ ಅವರನ್ನು ಕೊಲ್ಲುತ್ತೇನೆ ಎಂದು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೇಳಿದ್ದರು.