ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನು ಪಡೆದಿರುವ ತೆಲುಗು ನಟಿ ಹೇಮಾ ಮಾಧ್ಯಮಗಳಿಗೆ ಬಹಿರಂಗ ಸವಾಲು ಹಾಕಿದ್ದಾರೆ.
ಪ್ರಕರಣದಲ್ಲಿ ಯಾವುದೇ ರೀತಿಯ ತನಿಖೆ ಎದುರಿಸಲು ನಾನು ಸಿದ್ಧಳಿದ್ದೇನೆ. ಆದರೆ, ಮಾಧ್ಯಮಗಳಲ್ಲಿ ನನ್ನ ಬಗ್ಗೆ ಇಲ್ಲಸಲ್ಲದ ಆಪಾದನೆಗಳನ್ನು ಮಾಡಲಾಗುತ್ತಿದೆ. ಇದೆಲ್ಲ ಸರಿಯಲ್ಲ, ನಾನು ಇದಕ್ಕೆ ಸಂಬಂಧಿಸಿದಂತೆ ಹೋರಾಟ ನಡೆಸುತ್ತೇವೆ ಎಂದು ಸವಾಲು ಹಾಕಿದ್ದಾರೆ.
ವಿಡಿಯೋ ಮಾಡಿ ಬಿಡುಗಡೆ ಮಾಡಿರುವ ನಟಿ ಹೇಮಾ, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಅವರನ್ನು ಭೇಟಿಯಾಗಿ, ಇಡೀ ಪ್ರಕರಣದ ಬಗ್ಗೆ ಮಾಹಿತಿ ನೀಡಲು ತೀರ್ಮಾನಿಸಿದ್ದೇನೆ. ಶೀಘ್ರದಲ್ಲೇ ಭೇಟಿಯಾಗಿ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.
ಎಲೆಕ್ಟ್ರಾನಿಕ ಸಿಟಿಯ ರೆಸಾರ್ಟ್ ವೊಂದರಲ್ಲಿ ರೇವ್ ಪಾರ್ಟಿ ನಡೆಯುತ್ತಿದೆ ಎಂಬ ಆರೋಪದಲ್ಲಿ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು, ಕೆಲವು ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಜತೆಗೆ ಕೆಲ ನಟ, ನಟಿಯರನ್ನು ವಶಕ್ಕೆ ಪಡೆದಿದ್ದರು.
ಕೆಲ ದಿನಗಳ ಕಾಲ ವಿಚಾರಣೆಗೆ ಹಾಜರಾಗದೆ, ತಪ್ಪಿಸಿಕೊಂಡಿದ್ದ ನಟಿ ಹೇಮಾ, ಅಂತಿಮವಾಗಿ ಸಿಸಿಬಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದ್ದರು. ಅನಂತರ ಅವರನ್ನು ಬಂಧಿಸಿದ ಸಿಸಿಬಿ, ನ್ಯಾಯಾಂಗ ಬಂಧನಕ್ಕೆ ಕೊಟ್ಟಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಹದಿನೈದು ದಿನಗಳನ್ನು ಕಳೆದ ಹೇಮಾ ಅವರಿಗೆ ಇದೀಗ ನ್ಯಾಯಾಲಯ ಜಾಮೀನು ನೀಡಿದೆ.