ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಆರೋಪಕ್ಕೆ ಸಂಬಂಧಿಸಿ ಸರಕಾರದ ವಿರುದ್ಧ ಮುಗಿಬಿದ್ದಿರುವ ಬಿಜೆಪಿ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಗೆ ಒತ್ತಾಯಿಸಿದೆ.
ವಿಧಾನಸಭೆ ಅಧಿವೇಶನದ ಮುಂಚೆ ಪ್ರತಿಭಟನೆ, ಹೋರಾಟದ ಮೂಲಕ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನವನ್ನು ಬಿಜೆಪಿ ನಡೆಸುತ್ತಿದ್ದು, ಅದರ ಭಾಗವಾಗಿ ಸಿಎಂ ಮನೆಗೆ ಮುತ್ತಿಗೆ ಹಾಕುವ ಪ್ರಯತ್ನವನ್ನು ಬಿಜೆಪಿ ನಾಯಕರು ನಡೆಸಿದರು.
ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಿಎಂ ಮನೆಗೆ ಮುತ್ತಿಗೆ ಹಾಕುವ ಹೋರಾಟದಲ್ಲಿ ಸಿ.ಟಿ.ರವಿ, ರವಿಕುಮಾರ್, ಡಾ.ಅಶ್ವತ್ಥ ನಾರಾಯಣ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರು ಭಾಗವಹಿಸಿದ್ದರು. ಪೊಲೀಸರು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದರು.
ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸರಕಾರ ದಲಿತ ಸಮುದಾಯದ ಪರ ಎಂದು ಹೇಳಿಕೊಂಡು, ದಲಿತರ ಏಳಿಗೆಗೆ ಬಳಸಬೇಕಾಗಿದ್ದ, ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದೆ. ಪ್ರಕರಣದಲ್ಲಿ ಅಕ್ರಮ ನಡೆದಿರುವ ಎಲ್ಲ ದಾಖಲೆಗಳಿದ್ದರೂ, ಈವರೆಗೆ ಏನೂ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ ಎಂದರು.
ಪ್ರಕರಣ ಬೆಳಕಿಗೆ ಬಂದ ನಂತರ, ನಮ್ಮ ಹೋರಾಟದ ನಂತರ ಸಚಿವ ನಾಗೇಂದ್ರ ರಾಜೀನಾಮೆ ಪಡೆಯಲಾಗಿದೆ. ಆ ಮೂಲಕ ಕಣ್ಣೊರೆಸುವ ತಂತ್ರ ಮಾಡುತ್ತಿದೆ. ಆದರೆ, ತನಿಖೆಗೆ ವೇಗ ಕೊಡದೆ, ಆರೋಪಿಗಳನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತಿದೆ. ಹಣದ ದುರ್ಬಳಕೆಯಲ್ಲಿ ಸಿಎಂ ಮತ್ತು ಡಿಸಿಎಂ ಪಾತ್ರವೂ ಇದ್ದು, ಈ ತನಿಖೆ ಆಗಬೇಕಾದರೆ, ತನಿಖೆಯನ್ನು ಸಿಬಿಐಗೆ ವಹಿಸುವುದು ಉತ್ತಮ ಎಂದು ಒತ್ತಾಯಿಸಿದರು.