ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಬದಲಿಗೆ ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಸಂಪುಟ ಸಭೆ!
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಸೈಟ್ ಖರೀದಿ ಅಕ್ರಮ ಆರೋಪದ ಬಗ್ಗೆ ರಾಜ್ಯಪಾಲರು ಸ್ಪಷ್ಟನೆ ನೀಡುವಂತೆ ಕೇಳಿ ಶೋಕಾಸ್ ನೋಟಿಸ್ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ನಡೆಯಬೇಕಿದ್ದ ರಾಜ್ಯಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರೇ ಗೈರುಹಾಜರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಬದಲಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಸಚಿವ ಸಂಪುಟ ಸಭೆಯ ನೇತೃತ್ವ ವಹಿಸಿದ್ದಾರೆ. ಈಗಾಗಲೇ ಹಿರಿಯ ಸಚಿವರು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಸಂಪುಟ ಸಭೆಯಲ್ಲಿ ಹಾಜರಾಗಿದ್ದಾರೆ.
ಮೈಸೂರಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಂಚಿಕೆ ಮಾಡುವ ನಿವೇಶನಗಳ ಪೈಕಿ ಸಿದ್ದರಾಮಯ್ಯ ಅವರ ಪತ್ನಿ ಅವರಿಗೆ ಅಕ್ರಮವಾಗಿ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ವಕೀಲ ಟಿ.ಜೆ.ಅಬ್ರಹಾಂ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಅನುಮತಿ ನೀಡಬೇಕೆಂದು ಕೋರಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಅರ್ಜಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಮೈಸೂರಿನ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೋರಿ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖವಾಗಿರುವ ಅಂಶಗಳ ಕುರಿತಾಗಿ ವಿವರಣೆ ನೀಡುವಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ರಾಜ್ಯಪಾಲರ ಈ ನಡೆ ರಾಜಕೀಯವಾಗಿಯೂ ಸಾಕಷ್ಟು ಚರ್ಚೆಗೆ ಒಳಗಾಗಿ ಸಿಎಂ ಸಿದ್ದರಾಮಯ್ಯ ಪರ-ವಿರೋಧ ಚರ್ಚೆ ಜೋರಾಗಿ ಸಾಗಿದೆ.
ಈ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿ, ‘ಹೌದು, ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಮುಡಾ ಸೈಟ್ ಖರೀದಿ ಮಾಡಿದ ಬಗ್ಗೆ ವರದಿ ನೀಡಿ ತಿಳಿಸಿ ಎಂದು ಶೋಕಾಸ್ ನೋಟಿಸ್ ನೀಡಿದ್ದಾರೆ’ ಎಂದು ಹೇಳಿದ್ದಾರೆ.
ಆದರೆ ಮತ್ತೊಬ್ಬ ಹಿರಿಯ ಸಚಿವ ಈಶ್ವರ್ ಖಂಡ್ರೆ ಈ ಬಗ್ಗೆ ಪ್ರತಿಕ್ರಿಯಿಸಿ, ‘ರಾಜ್ಯಪಾಲರು ತಪ್ಪು ಗ್ರಹಿಕೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಸೈಟ್ ಖರೀದಿ ಅಕ್ರಮವಾಗಿ ನಡೆದಿದೆ ಎಂದು ಶೋಕಾಸ್ ನೋಟಿಸ್ ನೀಡಿದ್ದಾರೆ. ಆದರೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಇದೇ ರೀತಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರೂ ಕೂಡ ಸಿಎಂ ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಂಡರು.


