ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ: ಎಚ್.ಡಿ.ಕೆ-ಬಿ.ವೈ.ವಿಜಯೇಂದ್ರ ವಿರುದ್ಧ ದೂರು
ಬೆಂಗಳೂರು : ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ನ ಗ್ಯಾರಂಟಿಗಳು ನಿಲ್ಲುತ್ತದೆ ಎಂಬ ಬಿಜೆಪಿ-ಜೆಡಿಎಸ್ ಪ್ರಚಾರದ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ. ರಾಜ್ಯದ ಕೈ ಸರ್ಕಾರದ ಗ್ಯಾರಂಟಿ ಬಗ್ಗೆ ವಿಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಈ ಹಿನ್ನಲೆ ಬಿಜೆಪಿ, ಜೆಡಿಎಸ್ ನಾಯಕರಾದ ಎಚ್.ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ದೂರು ನೀಡಿದ್ದಾರೆ.
ನಿನ್ನೆಯಷ್ಟೇ ಬಿಜೆಪಿ ಅಧಿಕೃತ ಎಕ್ಸ್ ಖಾತೆ ಮೇಲೆ ಎಫ್ಐಆರ್
ಇನ್ನು ನಿನ್ನೆಯಷ್ಟೇ (ಏ.24) ಕಾಂಗ್ರೆಸ್ ಪ್ರಣಾಳಿಕೆ ಕುರಿತು ‘ಕೈ’ ಪ್ರಣಾಳಿಕೆಯೋ, ಮುಸ್ಲಿಂ ಲೀಗ್ ಪ್ರಣಾಳಿಕೆಯೋ ಎಂದು ಬಿಜೆಪಿ ಎಕ್ಸ್ನಲ್ಲಿ ಪೋಸ್ಟ್ ಮಾಡಿತ್ತು. ಈ ಬಗ್ಗೆ ಎಫ್ಎಸ್ಟಿ ತಂಡ ಮಲ್ಲೇಶ್ವರಂ ಠಾಣೆಗೆ ದೂರು ನೀಡಿತ್ತು. ಈ ಹಿನ್ನಲೆ ಆರ್.ಪಿ ಆ್ಯಕ್ಟ್ 125 ಮತ್ತು ಐಪಿಸಿ 153 ಅಡಿಯಲ್ಲಿ ದ್ವೇಷ ಮತ್ತು ಎರಡು ಗುಂಪುಗಳ ನಡುವೆ ಸ್ವಾಸ್ಥ್ಯ ಕೆಡಿಸಲು ಯತ್ನಿಸಿದ ಆರೋಪದ ಮೇಲೆ ಬಿಜೆಪಿ ಅಧಿಕೃತ ಎಕ್ಸ್ ಖಾತೆ ಮೇಲೆ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.