ಪರಿಷತ್ ಚುನಾವಣೆ ಅಭ್ಯರ್ಥಿ ಆಯ್ಕೆ: ಖರ್ಗೆ ನಿವಾಸದಲ್ಲಿ ಸಭೆ ಮುಕ್ತಾಯ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ನಡೆಯುತ್ತಿರುವ ಕಸರತ್ತು ಮತ್ತೊಂದು ಹಂತಕ್ಕೆ ಹೋಗಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನೆಯಲ್ಲಿ ನಡೆದ ಸಭೆ ಮುಕ್ತಾಯವಾಗಿದೆ.
ಕಳೆದ ಎರಡು ದಿನಗಳಿಂದ ಪರಿಷತ್ ಆಯ್ಕೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಪರಿಷತ್ ಸದಸ್ಯರ ಆಯ್ಕೆಗೆ ತಮ್ಮದೇ ಆದ ಪಟ್ಟಿಯೊಂದಿಗೆ ದೆಹಲಿಗೆ ತೆರಳಿದ್ದು, ಹೈಕಮಾಂಡ್ ಮುಂದೆ ತಮ್ಮ ಪಟ್ಟಿಯನ್ನು ಮಂಡಿಸಿದ್ದಾರೆ. ಆದರೆ, ಹೈಕಮಾಂಡ್ ತನ್ನದೇ ಆದ ಪಟ್ಟಿಯನ್ನು ರೆಡಿ ಮಾಡಿದ್ದು, ಈ ಪಟ್ಟಿಯ ಬಗ್ಗೆ ನಿಮಗಿರುವ ತಕರಾರುಗಳೇನು ಎಂದು ಸಿಎಂ ಮತ್ತು ಡಿಸಿಎಂ ಅವರನ್ನು ಪ್ರಶ್ನೆ ಮಾಡಿದ್ದಾರೆ.
ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಆಯ್ಕೆ ಮಾಡಲು ಚುನಾವಣೆ ನಡೆಯಲಿದೆ. ಇಲ್ಲಿ ಏಳು ಸ್ಥಾನಗಳು ಕಾಂಗ್ರೆಸ್ ಗೆಲ್ಲುವ ಸಾಧ್ಯತೆಗಳಿವೆ. ಹೀಗಾಗಿ, ಆ ಏಳು ಸ್ಥಾನಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಸರತ್ತು ನಡೆಯುತ್ತಿದೆ. ಏಳು ಸ್ಥಾನಕ್ಕೆ ಅರವತ್ತಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಅವರೆಲ್ಲರನ್ನೂ ಸಮಾಧಾನಪಡಿಸುವಂತಹ ಪಟ್ಟಿ ತಯಾರಿಸುವುದು ಸವಾಲಾಗಿ ಪರಿಣಮಿಸಿದೆ.
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜತೆಗೆ ಚರ್ಚೆ ನಡೆಸಿದ್ದು, ಪಕ್ಷಕ್ಕಾಗಿ ದುಡಿದವರು, ಪಕ್ಷ ಸಂಘಟನೆಯಲ್ಲಿ ನಿರಂತರವಾಗಿ ತೊಡಗಿಕೊಂಡಿರುವವರಿಗೆ ಟಿಕೆಟ್ ನೀಡಿದರೆ ಹೇಗೆ ಎಂದು ಚರ್ಚೆ ನಡೆಸಿದ್ದಾರೆ. ಸಿಎಂ ಮತ್ತು ಡಿಸಿಎಂ ಕೊಟ್ಟಿರುವ ಪಟ್ಟಿಯನ್ನಿಟ್ಟುಕೊಂಡು, ಹೈಕಮಾಂಡ್ ತನ್ನದೇ ಆದ ಪಟ್ಟಿಯನ್ನು ಅಂತಿಮಗೊಳಿಸಲು ತೀರ್ಮಾನಿಸಿದೆ ಎನ್ನಲಾಗಿದೆ.