ಸುದ್ದಿ

ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ಅಕ್ರಮ: ಮಾಜಿ ಎಂಡಿ ಬಂಧನ

Share It

ಬೆಂಗಳೂರು: ದೇವರಾಜು ಅರಸು ಟ್ರಕ್ ಟರ್ಮಿನಲ್‌ನಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿ ಸಿಐಡಿ ತನಿಖೆ ಕೈಗೆತ್ತಿಕೊಂಡಿದ್ದು, ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಎಸ್.ಶಂಕರಪ್ಪ ಅವರನ್ನು ಬಂಧಿಸಿದೆ.

ಡಿ.ದೇವರಾಜು ಅರಸು ಟ್ರಕ್ ಟರ್ಮಿನಲ್‌ನಲ್ಲಿ 47.10 ಕೋಟಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಸರಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು. ಶಂಕರಪ್ಪ ಅವರ ಅವಧಿಯಲ್ಲಿ ಅಕ್ರಮ ನಡೆದಿರುವ ಕುರಿತು ಸಾಕ್ಷಿಗಳು ಲಭ್ಯವಾದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

2021-22 ರ ಅವಧಿಯಲ್ಲಿ ಡಿ.ದೇವರಾಜು ಅರಸು ಟ್ರಕ್ ಟರ್ಮಿನಲ್ ನಲ್ಲಿ ಅಕ್ರಮ ನಡೆದಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಿ.ಎಸ್. ಶಿವಪ್ರಕಾಶ್ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. 2023 ಸೆಪ್ಟೆಂಬರ್ 23 ರಂದು ಈ ಬಗ್ಗೆ ಎಫ್‌ಐಆರ್ ದಾಖಲಾಗಿತ್ತು.

ನಿಗಮದಿಂದ 2021 ಅಕ್ಟೋಬರ್ 25 ರಂದು 194 ನೇ ನಿರ್ದೇಶಕ ಮಂಡಳಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಟರ್ಕ್ ಟರ್ಮಿನಲ್‌ಗಳ ದುರಸ್ತಿ ಹಾಗೂ ನಿರ್ವಹಣೆ ಕಾಮಗಾರಿ ತುರ್ತಾಗಿ ತುಂಡುಗುತ್ತಿಗೆ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿತ್ತು. 10 ಕೋಟಿವರೆಗೆ ತುಂಡು ಗುತ್ತಿಗೆ ನೀಡಲು ಅಕ್ರಮವಾಗಿ ಅನುಮೋದನೆ ನೀಡಲಾಗಿತ್ತು.

ಈ ಕಾಮಗಾರಿ ನಡೆಯದಿದ್ದರೂ ನಕಲಿ ದಾಖಲೆಗಳನ್ನು ಸೃಷ್ಟಿಸಿ ಹಣ ಪಡೆಯಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಕಚೇರಿ ಹಾಗೂ ಹಲವಾರು ಮನೆಗಳ ಮೇಲೆ ದಾಳಿ ನಡೆಸಿದ ಸಿಐಡಿ ಪೊಲೀಸರು 600 ಕ್ಕೂ ಹೆಚ್ಚು ದಾಖಲೆಗಳನ್ನು ಜಪ್ತಿ ಮಾಡಿ ಪರಿಶೀಲನೆ ನಡೆಸಿದ್ದರು.

ದಾಖಲೆಗಳ ಪರಿಶೀಲನೆ ವೇಳೆ ಅಕ್ರಮ ಸಾಭೀತಾದ ಹಿನ್ನೆಲೆಯಲ್ಲಿ ನಿಗಮದ ಮಾಜಿ ವ್ಯವಸ್ಥಾಪಕ ನಿದೇಶಕ ಎಸ್. ಶಂಕರಪ್ಪ ಅವರನ್ನು ಬಂಧನ ಮಾಡಲಾಗಿದೆ. ಎಸ್. ಶಂಕರಪ್ಪ ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಾಣಿಜ್ಯ ಪ್ರಚಾರ ಶಾಖೆಯ ಉಪನಿರ್ದೇಶಕರಾಗಿದ್ದ ಕಾರ್ಯನಿರ್ವಹಿಸಿದ್ದರು. 2021-22 ರಲ್ಲಿ ದೇವರಾಜು ಅರಸು ಟ್ರಕ್ ಮತ್ತು ಟರ್ಮಿನಲ್ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.


Share It

You cannot copy content of this page