ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಧರ್ಮಸ್ಥಳ ರಸ್ತೆಯಲ್ಲಿ ಭಾರಿ ಗಾತ್ರದ ಮರವೊಂದು ಕಾರಿನ ಮೇಲೆ ಬಿದ್ದಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಕಾರಿನ ಕುಟುಂಬವೊಂದು ಸುಬ್ರಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಈ ವೇಳೆ ಭಾರಿ ಮಳೆ ಸುರಿಯುತ್ತಿದ್ದರಿಂದ ಮರವೊಂದು ಕಾರಿನ ಮೇಲೆ ಮುರಿದು ಬಿದ್ದಿದೆ. ಸ್ಥಳೀಯರು ಮತ್ತು ಇತರೆ ವಾಹನ ಸವಾರರು ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿ ಸಿಲುಕಿದ್ದವರ ರಕ್ಷಣೆ ಮಾಡಿದ್ದಾರೆ.
ಚಾಲಕ ಕಾರಿನಲ್ಲಿಯೇ ಕೆಲವೊತ್ತು ಸಿಲುಕಿಕೊಂಡಿದ್ದು, ಆತನ ರಕ್ಷಣೆಗೆ ಸ್ಥಳೀಯರು ರಸಾಹಸಪಟ್ಟಿದ್ದಾರೆ. ಚಾಲಕ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಕಡಬದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೂಜಿ ಬಾಳ್ತಿಲ ಗ್ರಾಮದ ಬಳಿ ಘಟನೆ ನಡೆದಿದ್ದು, ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮರ ಉರುಳಿಬಿಳುವ ಪ್ರಕರಣಗಳು ಅಲ್ಲಲ್ಲಿ ವರದಿಯಾಗಿವೆ.