ಸುದ್ದಿ

ಮಕ್ಕಳಿಗೆ ಪಠ್ಯದ ಶಿಕ್ಷಣದ ಜೊತೆಗೆ ಅನುಭವಾತ್ಮಕ ಕಲಿಕೆ ಅತ್ಯಗತ್ಯ : ಜಿ.ಪ್ರಭು

Share It

ತುಮಕೂರು : ಮಕ್ಕಳಿಗೆ ಕೇವಲ ಪಠ್ಯ ಪುಸ್ತಕಗಳಲ್ಲಿರುವ ವಿಷಯಗಳನ್ನು ಭೋದಿಸಿ ಉತ್ತೀರ್ಣರಾಗುವಂತೆ ಮಾಡುವುದರ ಜೊತೆಗೆ ಅನುಭವಾತ್ಮಕ ಕಲಿಕೆಯ ಮೂಲಕ ಅವರ ಮುಂದಿನ ಭವಿಷ್ಯಕ್ಕೆ ಬೇಕಾದ ಅಂಶಗಳನ್ನೂ ಸಹ ಕಲಿಸುವ ಅವಶ್ಯಕತೆ ಇದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಶೈಕ್ಷಣಿಕ ಸಂವರ್ಧನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿರುವ ಮೂಲಭೂತ ಸೌಕರ್ಯಗಳ ಕೊರತೆಗೆ ಸಂಬಂಧಿಸಿದಂತೆ ವೈಜ್ಞಾನಿಕ ಸಮೀಕ್ಷೆ ಮೂಲಕ ಮಾಹಿತಿ ಕಲೆ ಹಾಕಿದ್ದು, ಈ ಮಾಹಿತಿಯನ್ವಯ ಮೂಲಭೂತ ಸೌಕರ್ಯ ಕೊರತೆಯಿರುವ ಶಾಲೆಗಳಿಗೆ ಕ್ರಿಯಾತ್ಮಕ ಶೌಚಾಲಯ, ಸುಸಜ್ಜಿತ ಕೊಠಡಿ, ಆವರಣ ಗೋಡೆ, ವ್ಯವಸ್ಥಿತ ಆಟದ ಮೈದಾನ, ಶುದ್ಧ ಕುಡಿಯುವ ನೀರಿನ ಘಟಕ, ಡೆಸ್ಕ್ ಸೇರಿದಂತೆ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಂಕಲ್ಪ ಮಾಡಲಾಗಿದೆ ಎಂದು ತಿಳಿಸಿದರು.

ಡಯಟ್ ಸಂಸ್ಥೆಯು ಶಿಕ್ಷಕರ ಕಾರ್ಯಕ್ಷಮತೆ ಹೆಚ್ಚಿಸಲು ಹಲವಾರು ಶೈಕ್ಷಣಿಕ ಕಾರ್ಯಕ್ರಮಗಳನ್ನು ರೂಪಿಸಿದ್ದು, ವಿದ್ಯಾರ್ಥಿಗಳಿಗೂ ಸಹ ಮೌಲ್ಯಾಧಾರಿತ ಶಿಕ್ಷಣ ನೀಡಲು ಉದ್ದೇಶಿಸಿದೆ ಎಂದು ಹೇಳಿದರು.

ಪ್ರತಿಯೊಬ್ಬ ವಿದ್ಯಾರ್ಥಿಗೂ ಗುಣಮಟ್ಟದ ಶಿಕ್ಷಣವನ್ನು ನೀಡುವ ನಿಟ್ಟಿನಲ್ಲಿ ಸಂಬಂಧಿಸಿದ ಎಲ್ಲಾ ಇಲಾಖೆಗಳು ಒಟ್ಟುಗೂಡಿ ಕೆಲಸ ಮಾಡಬೇಕು. ವ್ಯವಸ್ಥಿತವಾದ ಶಿಕ್ಷಣ ನೀಡಿದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಿ ಜನರು ಆರ್ಥಿಕವಾಗಿ ಸದೃಢವಾಗಲು ಸಾಧ್ಯವಾಗುತ್ತದೆ ಎಂದರು.

ಈ ಬಾರಿ ಜಿಲ್ಲೆಯ ಎಸ್.ಎಸ್.ಎಲ್.ಸಿ ಫಲಿತಾಂಶದ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು ಸರ್ಕಾರಿ ಶಾಲೆಗಳಲ್ಲಿ ಶೇಕಡಾ 68.60 ಹಾಗೂ ಅನುದಾನಿತ ಶಾಲೆಗಳಲ್ಲಿ ಶೇಕಡಾ 40ರಷ್ಟು ಫಲಿತಾಂಶ ಬಂದಿದ್ದು, ಅನುದಾನಿತ ಶಾಲೆಗಳು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಹಿಂದೆ ಉಳಿಯುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಅನುದಾನಿತ ಶಾಲೆಗಳ ಮೇಲೆ ಹೆಚ್ಚಿನ ನಿಗಾವಹಿಸಬೇಕು ಎಂದು ಸಲಹೆ ನೀಡಿದರು.ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಇಲಾಖೆಗೆ ಗೌರವ ತರಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲ ಸಿದ್ದಪ್ಪ ಪೂಜೇರಿ, ತುಮಕೂರು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ. ಮಂಜುನಾಥ್, ಮಧುಗಿರಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಆರ್. ಮಂಜುನಾಥ್, ಸೇರಿದಂತೆ ವಿವಿಧ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಣ ಸಂಘಗಳ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.


Share It

You cannot copy content of this page