ಬೆಂಗಳೂರು: ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದ ನಗರ ಪಾಲಿಕೆಯ ವಿಶೇಷ ಪರಿಷ್ಕೃತ ವಾರ್ಡ್ ಕರಡು ಮತದಾರರ ಪಟ್ಟಿ ಸಿದ್ಧತೆ ಕುರಿತ ಸಭೆಯನ್ನು ಆಯುಕ್ತರು ಹಾಗೂ ಅಪರ ಜಿಲ್ಲಾಚುನಾವಣಾಧಿಕಾರಿಗಳು, ಬೆಂಗಳೂರು ಪೂರ್ವ ನಗರ ಪಾಲಿಕೆ ಡಿ.ಎಸ್. ರಮೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ರಾಜ್ಯ ಚುನಾವಣಾ ಆಯೋಗದ ನಿರ್ದೇಶನಗಳ ಅನುಸಾರ ವಾರ್ಡ್ ಮತದಾರರ ಪಟ್ಟಿಯನ್ನು ನಿಖರ, ದೋಷರಹಿತ ಹಾಗೂ ಪಾರದರ್ಶಕವಾಗಿ ಸಿದ್ಧಪಡಿಸುವ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು. ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಬೆಂಗಳೂರು ಪೂರ್ವ ನಗರ ಪಾಲಿಕೆಯ 23 ವಾರ್ಡ್ಗಳ ಮತದಾರರ ಪಟ್ಟಿಯನ್ನು ಈಗಾಗಲೇ ಅಂತಿಮಗೊಳಿಸಿ ಪ್ರಕಟಿಸಲಾಗಿದ್ದು, ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ನಗರ ಪಾಲಿಕೆ ವಾರ್ಡ್ ಗಳ ಮತದಾರರ ಪಟ್ಟಿಯನ್ನು ಪರಿಷ್ಕರಣೆಗೆ ಒಳಪಡಿಸಿ ಹೊಸದಾಗಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸಬೇಕಾಗಿರುತ್ತದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಬಿಎಲ್ಓ ಮೇಲ್ವಿಚಾರಕರು ಹಾಗೂ ಮತಗಟ್ಟೆ ಮಟ್ಟದ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ನಿಗದಿತ ಕಾಲಮಿತಿಯಲ್ಲಿ ಪರಿಷ್ಕರಣೆ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಂಡು ಯಾವುದೇ ಲೋಪದೋಷಗಳಿಗೆ ಅವಕಾಶವಿಲ್ಲದಂತೆ ಕಾರ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯ ಯಶಸ್ಸಿಗೆ ನಿಖರವಾದ ಮತದಾರರ ಪಟ್ಟಿ ಅತ್ಯಂತ ಪ್ರಮುಖ ಆಧಾರವಾಗಿದ್ದು, ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಅಧಿಕಾರಿಗಳು ವಿಶೇಷ ಕಾಳಜಿಯೊಂದಿಗೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ವೇಗ ನೀಡುವ ಮೂಲಕ ಸಂಪೂರ್ಣ ಪಾರದರ್ಶಕ, ವಿಶ್ವಾಸಾರ್ಹ, ನಿಖರ ಹಾಗೂ ದೋಷರಹಿತ ಮತದಾರರ ಪಟ್ಟಿಯನ್ನು ಸಮಯಬದ್ಧವಾಗಿ ಸಿದ್ಧಪಡಿಸುವಂತೆ ಆಯುಕ್ತರು ಸೂಚಿಸಿದರು.
ಸಭೆಯಲ್ಲಿ ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿಗಳಾದ ಅಮರೇಶ್, ಉಪ ಆಯುಕ್ತರು (ವಲಯ–1 ಮತ್ತು ವಲಯ–2), ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಬಿಎಲ್ಓ ಮೇಲ್ವಿಚಾರಕರು, ಮತಗಟ್ಟೆ ಮಟ್ಟದ ಅಧಿಕಾರಿಗಳು ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

