ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದಿದೆ.
ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳು ವೈರಲ್ ಆದ ಹಿನ್ನೆಲೆಯಲ್ಲಿ ಮಾಜಿ ಸಚಿವರೂ ಆದ ಪ್ರಜ್ವಲ್ ತಂದೆ ರೇವಣ್ಣ ಅವರ ಮೇಲೆ ದೂರು ದಾಕಲಾಗಿತ್ತು. ಮನೆಗೆಲಸದಾಕೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಜತೆಗೆ, ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ಪುತ್ರ ತಮ್ಮ ತಾಯಿ ಕಾಣೆಯಾಗಿರುವ ಕುರಿತು ದೂರು ನೀಡಿದ್ದರು.
ಮೂರು ಎಫ್‌ಐಆರ್ ದಾಖಲಾದ ಹಿನ್ನೆಲೆಯಲ್ಲಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಪಡೆಯಲು ಸಿದ್ಧತೆ ನಡೆಸಿದ್ದರು. ಇದಕ್ಕಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿತು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ.
ಒಂದು ಕಾಲದ ರಾಜಕೀಯ ಶಕ್ತಿ ಕೇಂದ್ರ ಎನಿಸಿಕೊಂಡಿದ್ದ ಪದ್ಮನಾಭ ನಗರದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನಿವಾಸದಲ್ಲಿ ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆ ಮೂಲಕ ಮೊದಲ ಬಾರಿಗೆ ಜೈಲು ಪಾಲಾದ ದೇವೇಗೌಡರ ಕುಟುಂಬದ ರಾಜಕಾರಣಿ ಎನಿಸಿಕೊಂಡಿದ್ದಾರೆ ಮಾಜಿ ಸಚಿವರೂ ಆದ ರೇವಣ್ಣ, ಇನ್ನು ಪ್ರಜ್ವಲ್ ವಿರುದ್ಧದ ದೂರು ಮತ್ತಷ್ಟು ಗಂಭಿರ ಸ್ವರೂಪ ಪಡೆದುಕೊಳ್ಳುತ್ತಿದ್ದು, ವಿದೇಶದಲ್ಲಿಯೇ ಬಂಧನ ಮನಾಡುವ ಸಾಧ್ಯತೆಯಿದೆ.