ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಆಗಸ್ಟ್ 3 ತನಕ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ.
ವಾಲ್ಮೀಕಿ ನಿಗಮದ ಹಗರಣ ಪ್ರಕರಣದಲ್ಲಿ ಆರೋಪಿ ಸತ್ಯನಾರಾಯಣ ವರ್ಮನನ್ನು ಬಾಡಿವಾರೆಂಟ್ ಮೇಲೆ ನಮಗೆ ನೀಡಿ ಎಂದು ಕೇಂದ್ರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಹಗರಣ ಸಂಬಂಧ ಸತ್ಯನಾರಾಯಣ ವರ್ಮನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದು, ಸದ್ಯ ಆರೋಪಿ ಪರಪ್ಪನ ಅಗ್ರಹಾರದಲ್ಲಿದ್ದಾನೆ. ಕೇಂದ್ರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಭಾನುವಾರ ಪರಪ್ಪನ ಅಗ್ರಹಾರಕ್ಕೆ ತೆರಳಿ ಸತ್ಯನಾರಾಯಣ ವರ್ಮನನ್ನು ವಿಚಾರಣೆ ನಡೆಸಿದ್ದರು.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಹಿನ್ನೆಲೆ…
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಸಂಬಂಧಿಸಿದ ಬ್ಯಾಂಕ್ ಖಾತೆಯಿಂದ 18 ಬ್ಯಾಂಕ್ ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾಗಿತ್ತು. ಬೆಂಗಳೂರಿನ ಎಂ.ಜಿ ರಸ್ತೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಿಂದ ಈ ಹಣ ವರ್ಗಾವಣೆಯಾಗಿತ್ತು. ಈ ಸಂಬಂಧ ತನಿಖೆ ನಡೆಸಲು ರಾಜ್ಯಸರ್ಕಾರ ಎಸ್‌ಐಟಿ ರಚಿಸಿತ್ತು. ವಾಲ್ಮೀಕಿ ನಿಗಮದ ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪ್ತ ಎನ್ನಲಾದ ನಾಗರಾಜ್ ನೆಕ್ಕುಂಟಿ, ನಾಗೇಶ್ವರ್ ರಾವ್ ಎಂಬುವವರನ್ನು ಎಸ್‌ಐಟಿ ಬಂಧಿಸಿದೆ.
ಹಗರಣ ಸಂಬಂಧ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ (ಜುಲೈ 10) ಬೆಳ್ಳಂಬೆಳಗ್ಗೆ ವಾಲ್ಮೀಕಿ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿದ್ದರು. ನಿಗಮದ ಎಸ್ ಹಣದಿಂದ ಲೋಕಸಭೆ ಚುನಾವಣೆ ವೇಳೆ ಮದ್ಯ ಖರೀದಿ ಮಾಡಿದ್ದಾರೆ. ಈ ಬಗ್ಗೆ ಬಸನಗೌಡ ದದ್ದಲ್ ಮತ್ತು ಬಿ.ನಾಗೇಂದ್ರ ನಿವಾಸದಲ್ಲಿ ಮಹತ್ವದ ದಾಖಲೆಗಳ ಪತ್ತೆಯಾಗಿವೆ ಎಂದು ಕೇಂದ್ರ ಜಾರಿ ನಿರ್ದೇಶನಾಲಯವು ಪ್ರಕಟಣೆ ಮೂಲಕ ತಿಳಿಸಿತ್ತು.
ಈ ಎಲ್ಲ ಅಂಶಗಳನ್ನು ಕೇಂದ್ರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗಮನದಲ್ಲಿಟ್ಟುಕೊಂಡು ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಬಂಧಿಸಿದ್ದರು. ಇದೀಗ ಬಿ. ನಾಗೇಂದ್ರ ಅವರನ್ನು ಆಗಸ್ಟ್ 3 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.