ಪಾವಗಡ: ಸರ್ಕಾರದಿಂದ ಬರುವ ಸವಲತ್ತುಗಳನ್ನು ಜನರಿಗೆ ತಲುಪಿಸುವಾಗ ಅವರನ್ನು ಅನಾವಶ್ಯಕವಾಗಿ ಕಚೇರಿಗೆ ಅಲೆಸದೆ ಅವರ ಸಮಸ್ಯೆಗೆ ಸ್ಪಂದಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ನಗರದ ಎಸ್ ಎಸ್ ಕೆ ರಂಗಮಂದಿರದಲ್ಲಿ ನಡೆದ ತಾಲ್ಲೂಕು ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮ ಕೇವಲ ವೇದಿಕೆಗೆ ಸೀಮಿತವಾಗದೆ ಜನರಿಗೆ ಅನುಕೂಲವಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಸಾರ್ವಜನಿಕರ ಕುಂದು ಕೊರೆತೆಗಳಿಗೆ ಸ್ಪಂದಿಸಿದಾಗ ಮಾತ್ರ ಇಂಥ ಕಾರ್ಯಕ್ರಮ ಯಶಸ್ವಿಯಾಗುತ್ತದೆ. ನಿರ್ದಿಷ್ಟ ಸಮಯದಲ್ಲಿ ಜನರ ಸಮಸ್ಯೆಯನ್ನು ಪರಿಹರಿಸುವ ಉದ್ದೇಶವನ್ನು ಜನಸ್ಪಂದನಾ ಕಾರ್ಯಕ್ರಮ ಹೊಂದಿದೆ. ಕಾರ್ಯಕ್ರಮ ನಡೆಸುವುದಕ್ಕಿಂತ ಅದನ್ನು ಕಾರ್ಯರೂಪಕ್ಕೆ ತರುವುದು ಮುಖ್ಯ ಎಂದರು.
ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾದ ಜಿ .ಪ್ರಭು ಮಾತನಾಡಿ, ಉಸ್ತುವಾರಿ ಸಚಿವರು ಖುದ್ದಾಗಿ ತಾಲೂಕಿಗೆ ಭೇಟಿ ನೀಡಿ ಅಭಿವೃದ್ಧಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ಬಗ್ಗೆ ಅಧಿಕಾರಿಗಳು ಗಮನವಹಿಸಿ ಕೆಲಸ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ, ಉಪ ವಿಭಾಗಾಧಿಕಾರಿ ಗೂಟೂರು ಶಿವಪ್ಪ, ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಜನಕೀರಾಂ, ಪುರಸಭೆ ಸದಸ್ಯ ಜಿ. ನಾಗರಾಜು, ತಾಸಿಲ್ದಾರ್ ವರದರಾಜು ಇದ್ದಾರೆ.

