ರಾಜಕೀಯ ಸುದ್ದಿ

ಗ್ರೇಟರ್ ಬೆಂಗಳೂರು ಎಲೆಕ್ಷನ್; ಮೈತ್ರಿ ಬಗ್ಗೆ ಗೊಂದಲವೇ ಇಲ್ಲ ಎಂದ ಹೆಚ್.ಡಿ. ಕುಮಾರಸ್ವಾಮಿ

Share It

ಚುನಾವಣೆ ಸಿದ್ಧತಾ ಸಭೆ; ಹೆಚ್.ಡಿ. ದೇವೇಗೌಡರು, ನಿಖಿಲ್ ಕುಮಾರಸ್ವಾಮಿ ಭಾಗಿ

ವಾರ್ಡ್, ಮತಗಟ್ಟೆ ಮಟ್ಟದಲ್ಲಿ ಪಕ್ಷ ಸಂಘಟಿಸಲು ಸೂಚನೆ

ಬೆಂಗಳೂರು: ಮುಂಬರುವ ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ಮೈತ್ರಿಗೆ ಧಕ್ಕೆಯಾಗದಂತೆ ಕಾರ್ಯನೆಯರು, ಮುಖಂಡರು ಕೆಲಸ ಮಾಡಬೇಕು. ಹೆಚ್ಚು ವಾರ್ಡುಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಒಗ್ಗಟ್ಟಾಗಿ ದುಡಿಯಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಿ ಹೇಳಿದರು.

ಪಕ್ಷದ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರ ಉಪಸ್ಥಿತಿಯಲ್ಲಿ ನಡೆದ ಗ್ರೇಟರ್ ಬೆಂಗಳೂರು ಚುನಾವಣೆ ಕುರಿತ ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಸ್ಥಳೀಯವಾಗಿ ಸಮಸ್ಯೆ ಗೊಂದಲಗಳು ಏನಾದರೂ ಇದ್ದರೆ ಬಹಿರಂಗ ಹೇಳಿಕೆಗಳನ್ನು ಕೊಡಬೇಡಿ. ಅಂತಹ ವಿಷಯಗಳನ್ನು ನಮ್ಮ ಗಮನಕ್ಕೆ ತನ್ನಿ. ಬೀದಿಯಲ್ಲಿ ಹೇಳಿಕೆಗಳನ್ನು ನೀಡುವುದು ಬೇಡ ಎಂದು ಸಚಿವರು ತಾಕೀತು ಮಾಡಿದರು.

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಉತ್ತಮ ಸಾಧನೆ ಮಾಡಿದೆ. ಬೆಂಗಳೂರಿನಲ್ಲಿ ಕೂಡ ಇದೇ ಫಲಿತಾಂಶ ಪುನರಾವರ್ತನೆ ಆಗಲಿದೆ. ಈ ನಿಟ್ಟಿನಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಒಟ್ಟಾಗಿ ದುಡಿಮೆ ಮಾಡಬೇಕು ಎಂದು ಕೇಂದ್ರ ಸಚಿವರು ಕರೆ ನೀಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತದಿಂದ ಜನರು ರೋಸಿ ಹೋಗಿದ್ದಾರೆ. ಬೆಂಗಳೂರಿನಲ್ಲಿ ಮೂಲಸೌಕರ್ಯವನ್ನು ಸರ್ವನಾಶ ಮಾಡಿದ್ದಾರೆ. ಕಾಲಿಟ್ಟ ಕಡೆಯಲ್ಲೆಲ್ಲಾ ಗುಂಡಿಗಳು ಕಾಣುತ್ತವೆ. ತೆರಿಗೆ, ಬೆಲೆ ಹೇರಿಕೆಯಿಂದ ಜನರನ್ನು ಲೂಟಿ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಮಿತಿ ಮೀರಿದೆ. ಇದಕ್ಕೆಲ್ಲ ತಕ್ಕ ಪಾಠ ಕಲಿಸಲು ಜನರು ಸಿದ್ಧರಾಗಿದ್ದಾರೆ. ಹೀಗಾಗಿ ನಾವು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಕುಮಾರಸ್ವಾಮಿ ಅವರು ಸಲಹೆ ಮಾಡಿದರು.

ಮಾಜಿ ಪ್ರಧಾನಿಗಳ ಉಪಸ್ಥಿತಿ: ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಮಾತನಾಡಿ, ಮುಖಂಡರು ಮತ್ತು ಕಾರ್ಯಕರ್ತರು ವಾರ್ಡು ಮತ್ತು ಮತಗಟ್ಟೆ ಮಟ್ಟದಲ್ಲಿಯೇ ಪಕ್ಷವನ್ನು ಗಟ್ಟಿ ಮಾಡಬೇಕು ಎಂದು ಹೇಳಿದರು.

ನಮ್ಮ ಪಕ್ಷಕ್ಕೆ ಬೆಂಗಳೂರಿನಲ್ಲಿ ಗಟ್ಟಿ ನೆಲೆ ಇದೆ. ನಾನು ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ನಗರದ ಅಭಿವೃದ್ಧಿಗೆ ಕೊಡುಗೆ ನೀಡಿದ್ದೇನೆ. ಅದನ್ನು ಜನತೆಗೆ ಮನವರಿಕೆ ಮಾಡಿಕೊಡಿ. ಬೆಂಗಳೂರಿಗೆ ಕಾವೇರಿ ನೀರು ಕೊಟ್ಟಿದ್ದು, ಸಿರ್ಸಿ ಸರ್ಕಲ್ ಮೇಲು ಸೇತುವೆ ಕಟ್ಟಿದ್ದು, ಐಟಿ ಕ್ಷೇತ್ರಕ್ಕೆ ಉತ್ತೇಜನ, ಆ ಕ್ಷೇತ್ರಕ್ಕೆ ತೆರಿಗೆ ವಿನಾಯಿತಿ ನೀಡಿದ್ದು ಸೇರಿ ನಮ್ಮ ಪಕ್ಷದ ಕೆಲಸಗಳನ್ನು ನಗರದ ಜನತೆಗೆ ಮನದಟ್ಟು ಮಾಡಿ ಎಂದು ಮಾಜಿ ಪ್ರಧಾನಿಗಳು ಮುಖಂಡರು, ಕಾರ್ಯಕರ್ತರಿಗೆ ಸೂಚಿಸಿದರು.

ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕೂಡ ಈ ಸಂದರ್ಭದಲ್ಲಿ ಮಾತನಾಡಿದರು. ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಸಂಸದ ಮಲ್ಲೇಶ್ ಬಾಬು ಸೇರಿದಂತೆ ಪಕ್ಷದ ಬೆಂಗಳೂರು ನಗರದ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಮುಖಂಡರು, ಮಾಜಿ ಶಾಸಕರು ಹಾಜರಿದ್ದರು.


Share It

You cannot copy content of this page