ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಚಾರ್ಮಡಿ ಘಾಟ್ ನಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, ಸುಮಾರು ೧ ಕಿ.ಮೀ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ.
ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಮಳೆಯ ಕಾರಣದಿಂದ ಚಾರ್ಮಡಿ ಘಾಟ್‌ನಲ್ಲಿ ಭಾರಿ ನೀರು ಹರಿಯುತ್ತಿದ್ದು, ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಇದರಿಂದಾಗಿ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ನಡುವೆ ಸಂಪರ್ಕ ಕಡಿತಗೊಂಡಿದೆ.
ವೀಕೆಂಡ್ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ್ದ ಪ್ರವಾಸಿಗರು, ಬೆಂಗಳೂರಿಗೆ ವಾಪಸ್ ಆಗಮಿಸುತ್ತಿದ್ದು, ಭಾರಿ ವಾಹನ ಸಂಚಾರ ಚಾರ್ಮಡಿ ಘಾಟ್‌ನಲ್ಲಿತ್ತು. ಈ ನಡುವೆ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಸಂಚಾರ ವ್ಯವಸ್ಥೆ ಹದಗೆಟ್ಟಿದೆ. ಹೀಗಾಗಿ, ವಾಹನಗಳು ಸಾಲುಗಟ್ಟಿ ನಿಂತಿವೆ.
ಚಾರ್ಮಡಿ ಘಾಟ್‌ನಿಂದ ಕೊಟ್ಟಿಗೆಹಾರದವರೆಗೆ ರಸ್ತೆ ಸಂಪೂರ್ಣವಾಗಿ ಬಂದ್ ಆಗಿದೆ ಎನ್ನಲಾಗಿದೆ. ಅದೇ ರೀತಿ ಮೂಡಿಗೆರೆ ಕಡೆಗೂ ರಸ್ತೆ ಬಂದ್ ಆಗಿದೆ. ಪೊಲೀಸರು ಸ್ಥಳಕ್ಕಾಗಮಿಸಿದ್ದು, ವಾಹನಗಳನ್ನು ಮುಂದಕ್ಕೆ ಕಳುಹಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ, ಎಡಬಿಡದೆ ಸುರಿಯುತ್ತಿರುವ ಮಳೆ, ಹರಿಯುತ್ತಿರುವ ಭಾರಿ ಪ್ರಮಾಣದ ನೀರು ಅಲ್ಲಿಂದ ತೆರಳಲು ಅವಕಾಶ ನೀಡುತ್ತಿಲ್ಲ ಎನ್ನಲಾಗಿದೆ.