ಸುದ್ದಿ

ಹಾಸನದಲ್ಲಿ ಧಾರಾಕಾರ ಮಳೆ: ಹೇಮಾವತಿಗೆ ಹೆಚ್ಚಿದ ಒಳಹರಿವು, ಶಾಲೆಗಳಿಗೆ ರಜೆ

Share It

ಹಾಸನ: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಬೇಲೂರು ಹಾಗೂ ಆಲೂರು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಬಿರುಗಾಳಿ ಸಹಿತ ಮಳೆ ಮುಂದುವರಿದಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಎರಡು ತಾಲೂಕಿನ ಕೆಲವು ಭಾಗಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬೇಲೂರು ತಾಲೂಕಿನ ಅರೇಹಳ್ಳಿ, ಬಿಕ್ಕೋಡು, ಚೀಕನಹಳ್ಳಿ, ಕಸಬಾ-1 ಹಾಗೂ ಕಸಬಾ -2 ವಲಯಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಬೇಲೂರು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಆದೇಶ ಹೊರಡಿಸಿದ್ದಾರೆ.

ಆಲೂರು ತಾಲೂಕಿನ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೂ ರಜೆ ಘೋಷಿಸಲಾಗಿದೆ. ಶಾಲಾ ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು ಈ ದಿನ ಶಾಲೆಗೆ ಹಾಜರಾಗದಂತೆ ಸೂಕ್ತ ಕ್ರಮ ವಹಿಸುವಂತೆ ಆಲೂರು ತಾಲೂಕು ತಹಶೀಲ್ದಾರ್ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ಈ ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಬಿರುಗಾಳಿ ಸಹಿತ ಮಳೆ ಇನ್ನೂ ಮುಂದುವರಿದಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಹಶೀಲ್ದಾ‌ರ್ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಪೋಷಕರು ಹಾಗೂ ಸಾರ್ವಜನಿಕರು ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ತಾಲೂಕು ಆಡಳಿತ ಮನವಿ ಮಾಡಿದೆ. ಹಾಸನ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಹೇಮಾವತಿ ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ.

ಸಕಲೇಶಪುರ, ಆಲೂರು, ಬೇಲೂರು, ಹಾಸನ ಹಾಗೂ ಅರಕಲಗೂಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಾಸನ ಜಿಲ್ಲೆಯ ಮಲೆನಾಡು ಪ್ರದೇಶ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ ನೀರಿನ ಹರಿವು ಏರಿಕೆಯಾಗಿದೆ.


Share It

You cannot copy content of this page