ಸುದ್ದಿ

ವಾಲ್ಮೀಕಿ ನಿಗಮದ ಹಗರಣ: ಇಡಿ ಅಧಿಕಾರಿಗಳ ವಿರುದ್ಧದ ಎಫ್ಐಆರ್ ಗೆ ಹೈಕೋರ್ಟ್ ತಡೆ

Share It

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ಜಾರಿ ನಿರ್ದೇಶನಾಲಯದ(ಇಡಿ) ಇಬ್ಬರು ಅಧಿಕಾರಿಗಳ ವಿರುದ್ಧ ಕರ್ನಾಟಕ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ಬಿ.ನಾಗೇಂದ್ರ ಅವರ ಹೆಸರು ಹೇಳುವಂತೆ ಇಡಿ ಅಧಿಕಾರಿಗಳು ತನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆಂದು ಆರೋಪಿಸಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಕಲ್ಲೇಶ್ ಬಿ. ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಬೆಂಗಳೂರಿನ ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಇಡಿ ಅಧಿಕಾರಿಗಳಾದ ಕಣ್ಣನ್ ಮತ್ತು ಮಿತ್ತಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.

ತಮ್ಮ ವಿರುದ್ಧ ಎಫ್​​​ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯದ ಈ ಇಬ್ಬರು ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು.

ಹಗರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯನ್ನು ಬುಡಮೇಲು ಮಾಡುವ ಉದ್ದೇಶದಿಂದ ಎಫ್‌ಐಆರ್ ದಾಖಲಿಸಲಾಗಿದೆ. ಯಾವುದೇ ಪ್ರಾಥಮಿಕ ವಿಚಾರಣೆಯಿಲ್ಲದೆ ಕರ್ನಾಟಕ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಹೀಗಾಗಿ, ಎಫ್‌ಐಆರ್‌ಗೆ ತಡೆ ನೀಡಬೇಕು ಎಂದು ಇಡಿ ಅಧಿಕಾರಿಗಳು ಮನವಿ ಮಾಡಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಇಡಿ ಅಧಿಕಾರಿಗಳ ವಿರುದ್ಧದ ಎಫ್​ಐಆರ್​ಗೆ ತಡೆ ನೀಡಿ ಆದೇಶಿಸಿತು.


Share It

You cannot copy content of this page