ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರಿಸುತ್ತಿದ್ದು, ನಾಳೆ (ಅ.9) ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆ ಶುಕ್ರವಾರ ರಾಜ್ಯದ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದರಂತೆ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಹ ನಾಳೆ ಸಾಧಾರಣ ಮಳೆ ಜೊತೆ ಜೋರಾದ ಗಾಳಿ ಸಹ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇನ್ನು, ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪ್ರಭಾವದಿಂದಾಗಿ ಅರೇಬಿಯನ್ ಸಮುದ್ರದಿಂದ ತೇವಾಂಶಭರಿತ ಮಾರುತಗಳು ದಕ್ಷಿಣ ಒಳನಾಡಿನತ್ತ ಬೀಸುತ್ತಿದೆ. ಇದರಿಂದಾಗಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು IMD ತಿಳಿಸಿದೆ.
ಇದರ ಭಾಗವಾಗಿ ಅಕ್ಟೋಬರ್ 9ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಭಾರಿ ಮಳೆ (64.5 ರಿಂದ 115.5 ಮಿ.ಮೀ) ಬೀಳುವ ಸಾಧ್ಯತೆ ಇದೆ.
ಅಲ್ಲದೇ, ಶಿವಮೊಗ್ಗ, ಮಂಡ್ಯ, ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿ ಒಟ್ಟು 13 ಜಿಲ್ಲೆಗಳಿಗೆ ಹವಾಮಾನ ಇಲಾಖೆ ನಾಳೆ ಯೆಲ್ಲೋ ಅಲರ್ಟ್ ಘೋಷಿಸಿದೆ.
