ಬೆಂಗಳೂರು: ರಾಜ್ಯದ ಡಿಪ್ಲೊಮೋ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರಕ್ರಿಯೆಗಳಲ್ಲಿ ಅನ್ಯಾಯವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋಲಾರ ಜಿಲ್ಲಾ ಜನಪರ ವೇದಿಕೆ ಆಗ್ರಹಿಸಿದೆ.
ಆರೋಪಗಳ ಕುರಿತು ಬುಧವಾರ ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಪ್ರತಿನಿಧಿ ವೆಂಕಟಾಚಲಪತಿ ಕೆ.ಪಿ., ಡಿಪ್ಲೊಮೋ ಪರೀಕ್ಷೆಗಳ ಮೌಲ್ಯಮಾಪನ, ಉತ್ತರ ಪತ್ರಿಕೆಗಳ ನಿರ್ವಹಣೆ ಹಾಗೂ ಫಲಿತಾಂಶ ಪ್ರಕಟಣೆಯಲ್ಲಿ ಗಂಭೀರ ಅಕ್ರಮಗಳು ನಡೆದಿರುವ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ಸಾಕಷ್ಟು ದೂರುಗಳು ಬಂದಿವೆ ಎಂದು ತಿಳಿಸಿದರು.
ರಾಜ್ಯದ ವಿವಿಧ ಪಾಲಿಟೆಕ್ನಿಕ್ ಕಾಲೇಜುಗಳ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾಗಿರುವುದರಿಂದ ಸರ್ಕಾರ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು. ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡುವುದು ಅತ್ಯಗತ್ಯವಾಗಿದ್ದು, ಉತ್ತರ ಪತ್ರಿಕೆಗಳ ಮರುಪರಿಶೀಲನೆ, ಮೌಲ್ಯಮಾಪನ ಪ್ರಕ್ರಿಯೆಯ ಸಂಪೂರ್ಣ ತನಿಖೆ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ವೇಳೆ ಬೆಂಗಳೂರು ನಾಡಗೀರ್ ಸಂಜೆ ಕಾಲೇಜ್ ಸಂಬಂಧಿತ ಅಕ್ರಮಗಳ ಬಗ್ಗೆಯೂ ದೂರು ಸಲ್ಲಿಸಲಾಗುವುದು, ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಲಿಖಿತ ದೂರು ನೀಡಲಾಗಿದ್ದು, ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ತನಿಖಾ ಸಂಸ್ಥೆಗಳಿಗೆ ಒದಗಿಸಲಾಗುವುದು. ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ರಾಜ್ಯವ್ಯಾಪಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕೋಲಾರ ಜಿಲ್ಲಾ ಜನಪರ ವೇದಿಕೆಯ ರಮೇಶ್ ಬಾಬು ವಿ., ನಾಗರಾಜ್ ಕೆ. ಉಪಸ್ಥಿತರಿದ್ದರು.

