ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳು ಜೀವಿತ ಪ್ರಮಾಣಪತ್ರ (Life Certificate) ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ.
ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿರುವ ಸಿಎಂ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಈ ಬಗ್ಗೆ ಪರಿಶೀಲನೆ ಮಾಡಿ, ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ಆ ಮೂಲಕ ಸರ್ಕಾರವು ಅರ್ಹರಿಗೆ ಮಾತ್ರ ಗೃಹಲಕ್ಷ್ಮೀ ಹಣ ಪಾವತಿ ಖಚಿತಪಡಿಸಲು ಮುಂದಾಗಿದೆ.
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಲ್ಲಿ ಮರಣ ಹೊಂದಿರುವವರ ಮಾಹಿತಿಯನ್ನು ಕಾಲ-ಕಾಲಕ್ಕೆ ಪರಿಶೀಲನೆ ನಡೆಸಿ, ಮರಣ ಹೊಂದಿರುವ ಫಲಾನುಭವಿಗಳಗೆ ಧನಸಹಾಯ ಪಾವತಿಯಾಗುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲು ಸರ್ಕಾರ ಯೋಚಿಸಿದೆ.
ಗೃಹಲಕ್ಷ್ಮೀ ಯೋಜನೆಯಡಿ ಪಾವತಿಯಾಗುವ ಮೊತ್ತವು ಮರಣ ಹೊಂದಿರುವ ಫಲಾನುಭವಿಗಳಿಗೆ ಪಾವತಿಯಾಗುವುದನ್ನು ತಡೆಗಟ್ಟುವುದು ಅವಶ್ಯವಾಗಿದೆ. ಇದರಿಂದ ಸರ್ಕಾರ ಪಾವತಿಸುವ ಮೊತ್ತ ಸದ್ವಿನಿಯೋಗವಾಗಲು ಹಾಗೂ ಸರ್ಕಾರದ ಹಣ ಇತರೆ ಅರ್ಹ ಫಲಾನುಭವಿಗಳಿಗೆ ವಿತರಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದು ದಿನೇಶ್ ಗೂಳಿಗೌಡ ಮನವಿ ಮಾಡಿದ್ದರು.

