ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುವ ಸಂಭವ ಇರುವ ಕಾರಣ, ಸಂಭವನೀಯ ಮಳೆ ಹಾನಿ ತಪ್ಪಿಸಲು ಅಗತ್ಯವಾದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಕಂದಾಯ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಭಾನುವಾರ ಈ ಬಗ್ಗೆ ಸುತ್ತೋಲೆ ಹೊರಡಿಸಿದ ಕಂದಾಯ ಇಲಾಖೆಯ ಸರ್ಕಾರದ ಉಪಕಾರ್ಯದರ್ಶಿ ಎಸ್.ಆರ್.ಶಿವಶಂಕರ್ ರಾಜ್ಯದ ಎಲ್ಲಾ ಜಿಲ್ಲೆಗಳ ಆಯಾ ಜಿಲ್ಲಾಧಿಕಾರಿಗಳು ತಮ್ಮ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಸಿದ್ಧತಾ ಸಭೆ ನಡೆಸಿ ಮಳೆ ಹಾನಿಯನ್ನು ತಪ್ಪಿಸಲು ಅಗತ್ಯ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು
ಇದಕ್ಕಾಗಿ ಮಳೆಗಾಲ ಮುಂಚಿತವಾಗಿ ಮಳೆ ನೀರು ಸರಾಗವಾಗಿ ಹರಿಯುವ ಕಾಲುವೆ, ಚರಂಡಿ, ಸೇತುವೆಗಳ ಹೂಳು ತೆಗೆದು ಸ್ವಚ್ಛಗೊಳಿಸಬೇಕು. ನದಿ, ನೀರಾವರಿ ಕೆರೆ, ಕಾಲುವೆಗಳ ನೆರೆ ಪೀಡಿತ ಪ್ರದೇಶಗಳನ್ನು ಗುರುತಿಸಬೇಕು, ಅಲ್ಲದೆ ಚರಂಡಿಗಳ ಮೇಲಿನ ಕಲ್ಲುಗಳನ್ನು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುವುದು ಸೇರಿದಂತೆ ಎಲ್ಲಾ ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಕಂದಾಯ ಇಲಾಖೆಯ ಸುತ್ತೋಲೆಯಲ್ಲಿ ನಿರ್ದೇಶನ ನೀಡಲಾಗಿದೆ.