ಬೆಂಗಳೂರು: ಇದೇ ಏಪ್ರಿಲ್ 14 ರಂದು ರಾಜ್ಯದ ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಂಗಳೂರು ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಿದ್ದಾರೆ.
ಇದೇ ಏಪ್ರಿಲ್ 14 ರಂದು ಮಂಗಳೂರಿಗೆ ಆಗಮಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶಕ್ಕೆ ಬದಲಾಗಿ ಕೇವಲ ರೋಡ್ ಶೋ ಮೂಲಕ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಬಳಿಕ ಏಪ್ರಿಲ್ 14 ರಂದೇ ಸಂಜೆ 4 ಗಂಟೆಗೆ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿ ಅಲ್ಲಿ ಬಿಜೆಪಿ ಬೃಹತ್ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ. ಈ ಬೃಹತ್ ಬಿಜೆಪಿ-ಜೆಡಿಎಸ್(ಎನ್.ಡಿ.ಎ) ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್(ಎನ್.ಡಿ.ಎ) ಅಭ್ಯರ್ಥಿಯಾಗಿರುವ ಎಚ್.ಡಿ.ಕುಮಾರಸ್ವಾಮಿ ಸಹ ಭಾಗವಹಿಸಲಿದ್ದಾರೆ.
ಈ ಬೃಹತ್ ಸಮಾವೇಶದಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ತುಮಕೂರು ಕ್ಷೇತ್ರಗಳ ಎನ್.ಡಿ.ಎ ಮುಖಂಡರು, ಸಹಸ್ರಾರು ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಪ್ರಧಾನಿ ಮೈಸೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಅರಮನೆ ನಗರಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲು ಪೊಲೀಸ್ ಅಧಿಕಾರಿಗಳು ಮುಂದಾಗಿದ್ದಾರೆ.