ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ
ಪ್ರೇಮ ಪ್ರಕರಣಗಳಲ್ಲಿ ಬಿಗಿ ಕ್ರಮ ಕೈಗೊಳ್ಳಲು ಆಗ್ರಹ
ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಹುಬ್ಬಳ್ಳಿಯಲ್ಲಿ ನಡೆದ ಮತ್ತೊಂದು ಯುವತಿ ಹತ್ಯೆಯೇ ನಿದರ್ಶನ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
ಯುವತಿ ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ ಆಕೆಯನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಸರ್ಕಾರದ ಸಡಿಲ ನಿಲುವುಗಳೇ ಇದಕ್ಕೆಲ್ಲ ಕಾರಣ ಎಂದು ಸಚಿವ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮತ್ತೆ ಭಗ್ನ ಪ್ರೇಮಿಯೊಬ್ಬ ಅಂಜಲಿ ಎಂಬ ಯುವತಿಯನ್ನು ಚಾಕುವಿನಿಂದ ಇರಿದು ಕೊಂದಿದ್ದು, ನೇಹಾ ಪ್ರಕರಣದಲ್ಲಿ ಸರ್ಕಾರ ತೋರಿದ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಪದೇಪದೆ ಇಂತಹ ಪ್ರಕರಣ ಘಟಿಸುತ್ತಿದ್ದು, ರಾಜ್ಯ ಸರ್ಕಾರ ಕೂಡಲೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಸಚಿವ ಜೋಶಿ ಆಗ್ರಹಿಸಿದ್ದಾರೆ.
ಅಂಜಲಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿರುವ ಸಚಿವರು, ಕುಟುಂಬಕ್ಕೆ ಭಗವಂತ ನೋವನ್ನು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸಿದ್ದಾರೆ.