ಜಿಲ್ಲೆ ಸುದ್ದಿ

ಬಾಗಲಕೋಟೆ, ಬೆಳಗಾವಿ ಸೇರಿ 11 ಜಿಲ್ಲೆಗಳಲ್ಲಿ ಸೂರ್ಯಕಾಂತಿ ಖರೀದಿಗೆ ಆದೇಶ

Share It

ಬೆಂಗಳೂರು: ಬೆಂಬಲ ಬೆಲೆ ಯೋಜನೆ ಅಡಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಾಲ್‌ಗೆ ರೂ. 7,721 ದರದಲ್ಲಿ ಖರೀದಿಗೆ ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಆದೇಶ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳ ಅನ್ವಯ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ, ರಾಯಚೂರು ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಖರೀದಿ ಕೇಂದ್ರಗಳನ್ನು ತೆರೆಯಲು ಸಚಿವರು ನಿರ್ದೇಶನ ನೀಡಿದ್ದಾರೆ.

ನಾಫೆಡ್‌ ಮತ್ತು ಎನ್‌ಸಿಸಿಎಫ್‌ ಸಂಸ್ಥೆಗಳನ್ನು ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಗಳನ್ನಾಗಿ ಹಾಗೂ ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳವನ್ನು ರಾಜ್ಯ ಸರ್ಕಾರದ ಖರೀದಿ ಸಂಸ್ಥೆಗಳನ್ನಾಗಿ ನೇಮಕ ಮಾಡಲಾಗಿದೆ.

ನೋಂದಣಿ ಅವಧಿಯನ್ನು 50 ದಿನ ಹಾಗೂ ಖರೀದಿ ಅವಧಿಯನ್ನು 60 ದಿನ ನಿಗದಿಪಡಿಸಲಾಗಿದ್ದು, ನೋಂದಣಿ ಜೊತೆಗೆ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ತಾಂತ್ರಿಕ ಮತ್ತು ವೈಜ್ಞಾನಿಕ ಸೌಲಭ್ಯದಿಂದ ಕೂಡಿರುವ ಗೋದಾಮುಗಳನ್ನು ಹೊಂದಿರುವ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಖರೀದಿ ಕೇಂದ್ರಗಳನ್ನು ತೆರೆಯಬೇಕು. ನೋಂದಣಿ ಮತ್ತು ಖರೀದಿಯಲ್ಲಿ ಯಾವುದೇ ಸಮಸ್ಯೆಗಳಾಗದಂತೆ ಸಿದ್ದತೆ ಮಾಡಿಕೊಂಡು ಪ್ರಕ್ರಿಯೆ ಆರಂಭಿಸಬೇಕು ಎಂದು ಅವರು ಸೂಚಿಸಿದ್ದಾರೆ.

ರೈತರ ಹೆಸರಿನಲ್ಲಿ ವರ್ತಕರು ಮತ್ತು ಖರೀದಿ ಸಂಸ್ಥೆಗಳು ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ದುರ್ಬಳಕೆ ಮಾಡಿಕೊಳ್ಳಲು ಅವಕಾಶ ನೀಡಬಾರದು. ಖರೀದಿ ಪ್ರಗತಿಯ ವಿವರವನ್ನು ಪ್ರತಿ ದಿನ ರಾಜ್ಯ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಒದಗಿಸಬೇಕು ಎಂದೂ ತಿಳಿಸಿದ್ದಾರೆ.


Share It

You cannot copy content of this page