ಬೆಂಗಳೂರು; ಕರ್ನಾಟಕದಾದ್ಯಂತ ಸಿಇಟಿ (KCET) ಪರೀಕ್ಷೆಗಳು ಆರಂಭವಾಗಿದ್ದು, ಮೊದಲ ದಿನವೇ ರಾಜಧಾನಿ ಬೆಂಗಳೂರಿನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಆರೋಪ ವ್ಯಕ್ತವಾಗಿದೆ. ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರವನ್ನು (Sacred Thread) ಬಲವಂತವಾಗಿ ತೆಗೆಸಿ ಪರೀಕ್ಷೆಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದರೊಂದಿಗೆ, ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ವಿವಾದ ಮುನ್ನೆಲೆಗೆ ಬಂದಂತಾಗಿದೆ.
ಗುರುವಾರ (ಏಪ್ರಿಲ್ 23) ನಡೆದ ಪರೀಕ್ಷೆ ವೇಳೆ ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಪಾಸಣೆ ನೆಪದಲ್ಲಿ ಅಡ್ಡಗಟ್ಟಿದ ಸಿಬ್ಬಂದಿ, ಜನಿವಾರ ತೆಗೆಯುವಂತೆ ಸೂಚಿಸಿದ್ದಾರೆ ಎಂಬ ಆರೋಪವಿದೆ. ಇದಕ್ಕೆ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದಾಗ, ‘ಜನಿವಾರ ತೆಗೆಯದಿದ್ದರೆ ಪರೀಕ್ಷಾ ಕೇಂದ್ರದಿಂದ ಹೊರಹೋಗಿ’ ಎಂದು ಧಮಕಿ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಕೊನೆಗೆ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪೋಷಕರು ಅನಿವಾರ್ಯವಾಗಿ ಜನಿವಾರವನ್ನು ತೆಗೆಸಿ ಮಗನನ್ನು ಪರೀಕ್ಷಾ ಕೊಠಡಿಗೆ ಕಳುಹಿಸಿದ್ದರು.
ಘಟನೆ ಸಂಚಲನ ಮೂಡಿಸುತ್ತಿದ್ದಂತೆಯೇ ಶಿಕ್ಷಣ ಇಲಾಖೆ ಮತ್ತು ಸಿಇಟಿ ಸೆಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೋಷಕರ ಮನವೊಲಿಸಲು ಯತ್ನಿಸಿದ ಅಧಿಕಾರಿಗಳು, ‘ಎಲ್ಲೂ ಈ ಬಗ್ಗೆ ದೂರು ನೀಡಬೇಡಿ’ ಎಂದು ಪತ್ರ ಬರೆಸಿಕೊಂಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ‘ಧಾರ್ಮಿಕ ಹಕ್ಕಿಗೆ ಧಕ್ಕೆ ತರುವ ಇಂತಹ ಕೃತ್ಯಗಳು ನಿಲ್ಲಬೇಕು’ ಎಂದು ಪೋಷಕರು ಮತ್ತು ಧಾರ್ಮಿಕ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

