ಬೆಂಗಳೂರು: ದುಬೈನಿಂದ ನೇರವಾಗಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಇಂದು ಭಾನುವಾರ ಸಂಜೆ 6:30 ಕ್ಕೆ ತಡವಾಗಿ ಆಗಮಿಸುತ್ತಿದ್ದಾರೆ ಎಂದು ಎಸ್ಐಟಿ ಮೂಲಗಳು ಮಾಹಿತಿ ನೀಡಿವೆ.
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖಾ ತಂಡದ ಮುಂದೆ ವಿಚಾರಣೆಗೆ ಹಾಜರಾಗಲು ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಲುಕ್ ಔಟ್ ನೋಟಿಸ್ ಮತ್ತು ಬ್ಲೂ ಕಾರ್ನರ್ ನೋಟಿಸ್ ನೀಡಲಾಗಿತ್ತು. ಇಂದು ಬೆಳಗ್ಗೆಯವರೆಗೂ ದುಬೈನಲ್ಲಿ ಅಜ್ಞಾತರಾಗಿ ಎಸ್ಐಟಿ ತನಿಖಾ ತಂಡಕ್ಕೆ ವಿಚಾರಣೆಗೆ ಸಿಗದೆ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಕೊನೆಗೂ ಇಂದು ಮಧ್ಯಾಹ್ನ ದುಬೈನಿಂದ ನೇರವಾಗಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 6:30 ಕ್ಕೆ ಬಂದಿಳಿಯಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಈ ಹಿನ್ನೆಲೆಯಲ್ಲಿ ಎಸ್ಐಟಿ ಪೊಲೀಸರು ಈಗಾಗಲೇ ಕೆಐಎಎಲ್ ಗೆ ಆಗಮಿಸಿ ಪ್ರಜ್ವಲ್ ರೇವಣ್ಣ ಅವರನ್ನು ವಶಕ್ಕೆ ಪಡೆದು ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಗೆ ಕರೆದೊಯ್ಯಲು ಸನ್ನದ್ಧವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇದೇ ವೇಳೆ ಅತ್ತ ಹೊಳೆನರಸೀಪುರದ ಶಾಸಕ ಎಚ್.ಡಿ.ರೇವಣ್ಣ ನಿವಾಸದಲ್ಲಿ ನೀರಸ ಮೌನ ಆವರಿಸಿದೆ. ಸದ್ಯ ಹೊಳೆನರಸೀಪುರ ಮನೆಯಲ್ಲಿ ಭವಾನಿ ರೇವಣ್ಣ ಅವರೊಬ್ಬರೇ ಇದ್ದಾರೆ. ಮುಂಜಾಗ್ರತಾ ಕ್ರಮವಾಗಿ ಹೊಳೆನರಸೀಪುರದ ಶಾಸಕ ರೇವಣ್ಣ ಮನೆಯ ಸುತ್ತಲೂ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.