ಉಪಯುಕ್ತ ಸುದ್ದಿ

ಏ.3ರವರೆಗೆ ರಾಜ್ಯಾದ್ಯಂತ ಮಳೆಯ ಮುನ್ಸೂಚನೆ: ಬೆಂಗಳೂರಿನಲ್ಲಿಯೂ ಭಾರಿ ಮಳೆ !

Share It

ಬೆಂಗಳೂರು: ಉತ್ತರ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಕಂಡುಬಂದಿರುವ ಟ್ರಫ್ (ವಾತಾವರಣದಲ್ಲಿ ಗಾಳಿಯ ಚಲನೆಯಿಂದ ಉಂಟಾಗುವ ಪರಿಣಾಮ) ಮತ್ತು ದಕ್ಷಿಣ ಒಳನಾಡಿನಲ್ಲಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಏಪ್ರಿಲ್ 3ರವರೆಗೆ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಮುಂದಿನ 5 ದಿನಗಳವರೆಗೆ ಗರಿಷ್ಠ ಉಷ್ಣಾಂಶ 35ರಿಂದ 36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಮುಂದಿನ 5 ದಿನಗಳವರೆಗೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 39 ರಿಂದ 40 ಡಿಗ್ರಿ ಸೆಲ್ಸಿಯಸ್ ಇರಲಿದೆ.​ ಬೀದರ್, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ 37 ರಿಂದ 39 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ.

ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ 34 ರಿಂದ 36 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ 36 ರಿಂದ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರಲಿದೆ.​ ಮಳೆಯ ಸಮಯದಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 40 ರಿಂದ 50 ಕಿಲೋಮೀಟರ್ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Share It

You cannot copy content of this page