ರಾಯಚೂರು: ಬುಲೆಟ್ ಗಾಡಿಯಲ್ಲಿ ತೆರಳುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸುಂಕೇಶ್ವರಹಾಳ ಗ್ರಾಮದಲ್ಲಿ ಜರುಗಿದೆ.
ಜಿಲ್ಲೆಯ ದೇವದುರ್ಗ ತಾಲೂಕಿನ ಸುಂಕೇಶ್ವರಹಾಳ ಗ್ರಾಮದಲ್ಲಿ ಈ ದುರ್ಘಟನೆ ಮಂಗಳವಾರ ರಾತ್ರಿ ಸಮಯದಲ್ಲಿ ಸಂಭವಿಸಿದೆ. ಹದ್ದಿನಾಳ ಗ್ರಾಮದ ನಿವಾಸಿ ಭೂಮಾನಂದ (32) ಮೃತ ಯುವಕ ಎಂದು ಗುರುತಿಸಲಾಗಿದೆ. ಬುಲೆಟ್ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ನಡುರಸ್ತೆಯಲ್ಲೇ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿದ್ದು, ತೀವ್ರ ರಕ್ತಸ್ರಾವದಿಂದ ಭೂಮಾನಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಗಬ್ಬೂರು ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಕೊಲೆಗೆ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಘಟನೆಯನ್ನು ಎಲ್ಲಾ ಆಯಾಮಗಳಲ್ಲಿ ಗಬ್ಬೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗಬ್ಬೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
“ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವೈಯಕ್ತಿಕ ವಿಚಾರಕ್ಕೆ ಹತ್ಯೆ ನಡೆದಿದೆ ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಸದ್ಯ ಕೊಲೆಯಾದ ವ್ಯಕ್ತಿಯ ಸಹೋದರ ಬೆಂಗಳೂರಿನಲ್ಲಿದ್ದು, ಅವರು ನೀಡುವ ದೂರಿನ ಆಧಾರ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣಾಂಗ್ಷು ಗಿರಿ ತಿಳಿಸಿದ್ದಾರೆ.

