ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಮತ್ತು ಶಿರಸಿ ಶಾಸಕ ಶಿವರಾಮ್ ಹೆಬ್ಬಾರ್ ಅವರನ್ನು ಬಿಜೆಪಿ ಉಚ್ಛಾಟನೆ ಮಾಡಿದೆ.
ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದು ಮತ್ತು ಇನ್ನಿತರ ಕಾರಣಗಳಿಗೆ ಈ ಇಬ್ಬರು ಶಾಸಕರನ್ನು ಬಿಜೆಪಿ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿದೆ. ಈ ಇಬ್ಬರು ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದು ಗೆಲುವು ಸಾಧಿಸಿದ್ದರೂ, ಕಾಂಗ್ರೆಸ್ ಜತೆಗೆ ಗುರುತಿಸಿಕೊಂಡಿದ್ದರು.
ಕಾಂಗ್ರೆಸ್ ಪರವಾದ ಅನೇಕ ಹೇಳಿಕೆಗಳನ್ನು ನೀಡಿದ್ದಲ್ಲದೆ, ಬಿಜೆಪಿಯ ಕೆಲವು ವಿದ್ಯಮಾನಗಳ ಕುರಿತು ಬಹಿರಂಗವಾಗಿ ಟೀಕೆ ಮಾಡಿದ್ದರು. ಎಸ್.ಟಿ.ಸೋಮಶೇಖರ್ ಅವರಂತೂ ಸಿದ್ದರಾಮಯ್ಯ ಮತ್ತು ಡಿಕೆಶಿ ಜತೆಗೆ ಅನೇಕ ಸಭೆಗಳಲ್ಲಿ ಬಹಿರಂಗವಾಗಿ ಕಾಣಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಈ ಇಬ್ಬರು ಶಾಸಕರನ್ನು ಉಚ್ಛಾಟನೆ ಮಾಡುವಂತೆ ಒತ್ತಡ ಕೇಳಿಬಂದಿತ್ತು.
ಈ ಇಬ್ಬರು ನಾಯಕರು ಅದಾಗಲೇ ಮಾನಸಿಕವಾಗಿ ಬಿಜೆಪಿಯಿಂದ ದೂರವಾಗಿದ್ದರೂ ಎಂದೇ ಹೇಳಬಹುದು. ಇದೀಗ ಬಿಜೆಪಿ ಹೈಕಮಾಂಡ್ ಅಧಿಕೃತವಾಗಿ ಅವರನ್ನು ಪಕ್ಷದಿಂದ ಹೊರಹಾಕಿದೆ. ಇದೀಗ ಅವರ ಶಾಸಕ ಸ್ಥಾನದ ಕತೆಯೇನು ಎಂಬುದು ಮಾತ್ರ ಕುತೂಹಲಕ್ಕೆ ಕಾರಣವಾಗಿದೆ.
Updating…