ಮಹಾರಾಷ್ಟ್ರದ ಲಾತೂರ್ನಲ್ಲಿ ಹೃದಯ ಕಲುಕುವ ಘಟನೆ ಬೆಳಕಿಗೆ ಬಂದಿದೆ. ಕೌಟುಂಬಿಕ ಕಲಹದಿಂದ ಮನನೊಂದ 25 ವರ್ಷದ ಯುವ ತಾಯಿ ತನ್ನ ಇಬ್ಬರು ಪುಟ್ಟ ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಈ ದುರ್ಘಟನೆಯಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.
ಮಾಹಿತಿಯ ಪ್ರಕಾರ, ಹಲವು ದಿನಗಳಿಂದ ಕುಟುಂಬದ ಒಳಜಗಳಗಳಿಂದ ಬಳಲುತ್ತಿದ್ದ ಮಹಿಳೆ ಭಾನುವಾರ ರಾತ್ರಿ ಈ ತೀವ್ರ ನಿರ್ಧಾರ ತೆಗೆದುಕೊಂಡಿದ್ದಾಳೆ. ಆಕೆಯ ಪತಿಯೊಂದಿಗೆ ನಡೆದ ವಾಗ್ವಾದ ತಡರಾತ್ರಿ ವಿಕೋಪಕ್ಕೆ ತಿರುಗಿದ್ದು, ಇದರಿಂದ ಬೇಸತ್ತ ಮಹಿಳೆ ತನ್ನ ಮಕ್ಕಳೊಂದಿಗೆ ಮನೆಯಿಂದ ಹೊರಟಿದ್ದಾಳೆ.
ರಾತ್ರಿ ಸುಮಾರು 1.30ರ ಸುಮಾರಿಗೆ ಮನೆಬಿಟ್ಟು ಹೊರಟ ಮಹಿಳೆ ತನ್ನ 5 ವರ್ಷದ ಮಗಳು ಹಾಗೂ 3 ವರ್ಷದ ಮಗನೊಂದಿಗೆ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಇತ್ತ, ಮಹಿಳೆ ಮತ್ತು ಮಕ್ಕಳು ಕಾಣೆಯಾಗಿದ್ದರಿಂದ ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದರು. ನಂತರ ಸೋಮವಾರ ಮಧ್ಯಾಹ್ನ ವೇಳೆಗೆ ಕೆರೆಯಲ್ಲಿ ಮೂವರ ಶವಗಳು ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹಗಳನ್ನು ಮೇಲಕ್ಕೆತ್ತಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಈ ಘಟನೆ ಕೌಟುಂಬಿಕ ಸಮಸ್ಯೆಗಳು ಎಷ್ಟರ ಮಟ್ಟಿಗೆ ಗಂಭೀರ ಪರಿಣಾಮ ಉಂಟುಮಾಡಬಹುದು ಎಂಬುದನ್ನು ಮತ್ತೊಮ್ಮೆ ತೋರಿಸಿದೆ. ಕುಟುಂಬದೊಳಗಿನ ಸಮಸ್ಯೆಗಳನ್ನು ಸಂವಾದದ ಮೂಲಕ ಪರಿಹರಿಸುವುದು ಹಾಗೂ ಸಂಕಷ್ಟದ ಸಮಯದಲ್ಲಿ ನೆರವು ಪಡೆಯುವುದು ಅತ್ಯಂತ ಮುಖ್ಯವಾಗಿದೆ

