ಅಧಿಕಾರಕ್ಕಾಗಿ ಜೆಡಿಎಸ್ ಪಕ್ಷವನ್ನೇ ತ್ಯಾಗ ಮಾಡಿದ ಕುಮಾರಣ್ಣನಿಗೆ ಸಾಷ್ಟಾಂಗ ನಮಸ್ಕಾರ: ಡಿಕೆ ಶಿವಕುಮಾರ್
ಕುಮಾರಸ್ವಾಮಿ, ನಿಮ್ಮ ತಂದೆ ಈ ಜಿಲ್ಲೆಗೆ ಬಂದು ನನ್ನ ಕರ್ಮಭೂಮಿ, ಪುಣ್ಯ ಭೂಮಿ ಎಂದು ಹೇಳಿ ಇಡೀ ಕುಟುಂಬ ಅಧಿಕಾರ ಅನುಭವಿಸುವಂತೆ ಮಾಡಿದರು. ನಿಮ್ಮ ತಂದೆ ಈ ಜಿಲ್ಲೆಯಿಂದ ಮುಖ್ಯಮಂತ್ರಿ, ಪ್ರಧಾನಮಂತ್ರಿಯಾದರು. ನಿಮ್ಮ ಧರ್ಮಪತ್ನಿ ಇದೇ ಜಿಲ್ಲೆಯಲ್ಲಿ ಶಾಸಕರಾದರು. ನೀನು ಈ ಭಾಗದಿಂದ ಸಂಸದನಾಗಿ, ಶಾಸಕನಾಗಿ, ಮುಖ್ಯಮಂತ್ರಿಯಾಗಿ ಅಧಿಕಾರ ಅನುಭವಿಸಿದೆ. ಆದರೂ ನಿಮ್ಮ ಪಕ್ಷದ ಬಾವುಟ ಇಲ್ಲದೇ ಈ ಪಾದಯಾತ್ರೆ ಮಾಡುತ್ತಿದ್ದೀರಲ್ಲಾ, ನಿಮಗೆ ಸ್ವಾಭಿಮಾನವೇನಾದರೂ ಇದೆಯೇ ಎಂದು ಲೇವಡಿ ಮಾಡಿದರು.
ಕುದುರೆ ಎಷ್ಟೇ ಚೆನ್ನಾಗಿ ರಥ ಓಡಿಸಿದರೂ ಚಾಟಿ ಏಟು ತಪ್ಪುವುದಿಲ್ಲ. ಚುನಾವಣೆಯಲ್ಲಿ ಮೈಸೂರಿನಿಂದ ಕೆಂಗೇರಿವರೆಗೂ ಬರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ, ನಿಮ್ಮ ಹೋರಾಟ ನಡೆಯುತ್ತದೆ. ಕೆಲವೆಡೆ ನಾವು ಗೆದ್ದಿದ್ದೇವೆ, ಕೆಲವೆಡೆ ನೀವು ಗೆದ್ದಿದ್ದೀರ. ಲೋಕಸಭೆ ಚುನಾವಣೆಯಲ್ಲಿ ನಾನು ಯಾಮಾರಿದೆ, ನನ್ನ ಲೆಕ್ಕಾಚಾರ ವಿಫಲವಾಗಿ ನೀವು ಗೆದ್ದಿದ್ದೀರಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಪನ್ನು ಗೌರವಿಸುತ್ತೇನೆ. ಅವರು ಹೇಳಿರುವ ಪಾಠ ಕಲಿಯುತ್ತೇನೆ.
ಕುಮಾರಸ್ವಾಮಿ ಮೊನ್ನೆಯಷ್ಟೇ ಮಾಧ್ಯಮಗಳ ಮುಂದೆ ನೀನು ಏನು ಹೇಳಿದ್ದೆ? ಪಾದಯಾತ್ರೆಗೆ ಬೆಂಬಲವಿಲ್ಲ ಎಂದಿದ್ದೆ. ಆದರೆ ಇಲ್ಲಿಯವರೆಗೂ ಇದು ನನ್ನ ಭೂಮಿ, ಇಲ್ಲಿ ನಾನು ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತೇನೆ, ಬಿಜೆಪಿ ಅಲ್ಲ ಎಂದು ಹೇಳಲು ನಿನಗೆ ಧೈರ್ಯ ಸಾಲುತ್ತಿಲ್ಲ ಅಲ್ಲವೇ ಎಂದು ಕಿಡಿ ಕಾರಿದರು.


