ಕುಮಟಾ: ಶಾಲಾ ಓಮಿನಿ ವಾಹನವೊಂದು ರಸ್ತೆಯಲ್ಲಿ ನಿಂತಿದ್ದ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದಲ್ಲಿ ನಡೆದಿದೆ.
ಅಪಘಾತದಲ್ಲಿ ಚಾಲಕ ಹಾಗೂ ನಾಲ್ವರು ಮಕ್ಕಳಿಗೆ ಗಂಭೀರವಾಗಿ ಗಾಯಗಳಾಗಿವೆ ಎಂದು ಹೇಳಲಾಗುತ್ತಿದೆ. ಚಾಲಕ ಜಟ್ಟಿ ಮುಕ್ರಿ ಮಕ್ಕಳಾದ ತನಿಷ್ಕ, ಆದ್ವಿತ್ ಅರ್ಜುನ್ ಆಯಿರಾ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಕುಮಟಾದ ಸರಕಾರಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಶಾಲೆಯಿಂದ ತೆರಳುವಾಗ ಓಮಿನಿ ವಾಹನ ರಸ್ತೆ ಬದಿಯಲ್ಲಿ ನಿಂತಿದ್ದ ಬುಲೇರೋ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನಿಗೆ ತಲೆ ಸುತ್ತು ಬಂದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿದೆ ಎಂದು ಹೇಳಲಾಗಿದೆ. ಇದರಿಂದಾಗಿ ಚಾಲಕ ಮತ್ತು ಮಕ್ಕಳಿಗೆ ಗಾಯಗಳಾಗಿವೆ. ಓಮಿನಿಯ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.
ಕುಮಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

