ಈಶ್ವರಪ್ಪಗೆ ದೆಹಲಿಗೆ ಬರಲು ಆಹ್ವಾನಿಸಿದ ಶಾ
ಶಿವಮೊಗ್ಗ: ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ವಿರುದ್ಧವೇ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಮೂಲಕ ಸಂಪರ್ಕಿಸಿ ಮಾತನಾಡಿದ್ದಾರೆ.
ಈ ದೂರವಾಣಿ ಮಾತುಕತೆಯಲ್ಲಿ ಅಮಿತ್ ಶಾ ಅವರು “ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದು ಏತಕ್ಕೆ” ಎಂದು ಈಶ್ವರಪ್ಪ ಅವರನ್ನು ಪ್ರಶ್ನಿಸಿದ್ದಾರೆ. ಅದಕ್ಕೆ ಉತ್ತರಿಸಿದ ಈಶ್ವರಪ್ಪ ಅವರು “ಮೊದಲು ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾಯಿಸಿ, ಆನಂತರ ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನನ್ನ ನಾಮಪತ್ರವನ್ನು ವಾಪಸ್ ಪಡೆಯುತ್ತೇನೆ ಎಂದು ಷರತ್ತು ಹಾಕಿದ್ದಾರೆ.
ಆಗ ಅಮಿತ್ ಶಾ ಅವರು ” ಆ ಬಗ್ಗೆ ದೆಹಲಿಯಲ್ಲಿ ಮಾತನಾಡೋಣ, ಬುಧವಾರ ದೆಹಲಿಗೆ ಬನ್ನಿ” ಎಂದು ಆಹ್ವಾನಿಸಿದ್ದಾರೆ. ಹೀಗಾಗಿ ಈಶ್ವರಪ್ಪ ಅವರು ಬುಧವಾರ ದೆಹಲಿಗೆ ಪ್ರಯಾಣ ಬೆಳೆಸಿ ಅಮಿತ್ ಶಾ ಸಂಧಾನ ಮಾತುಕತೆ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.